ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?

ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.  ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು.
INDIA ಮೈತ್ರಿ ಕೂಟ ನಾಯಕರು
INDIA ಮೈತ್ರಿ ಕೂಟ ನಾಯಕರು
Updated on

ಬೆಂಗಳೂರು: ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್'ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ  ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

2006ರಲ್ಲಿ ಬಿಜೆಪಿ ಜೊತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??

ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ಕುಮಾರಸ್ವಾಮಿ ತಪರಾಕಿ ಹಾಕಿದ್ದಾರೆ.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಎಚ್.ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ನವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ. ಮೈತ್ರಿಯಿಂದ ಜೆಡಿಎಸ್ ಕೋಮುವಾದಿಯಾಗುತ್ತದಾ? ಅಥವಾ ಬಿಜೆಪಿ ಜಾತ್ಯತೀತ ಸಿದ್ಧಾಂತ ಅನುಸರಿಸುತ್ತದಾ? ಎಂಬುದನ್ನು ಕುಮಾರಸ್ವಾಮಿ ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com