
ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೀಗ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಈ ಕುರಿತು ಸಿದ್ದರಾಮಯ್ಯ ಅವರು ಮಾತನಾಡಿದ್ದು, ತಾವು ಮತ್ತು ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಚುನಾಯಿತ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು.
'ಇಲ್ಲ, ಅದು ಆಗುವುದಿಲ್ಲ. ಏಕೆಂದರೆ, ನಾವು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಮೂಲಕ ಹೋಗಬೇಕು. ಹೈಕಮಾಂಡ್ ಸ್ವಂತ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಹೊಸದಾಗಿ ಚುನಾಯಿತ ಶಾಸಕರ ಅಭಿಪ್ರಾಯದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರು ಜುಲೈ 2020 ರಲ್ಲಿ ದಿನೇಶ್ ಗುಂಡೂರಾವ್ ಅವರ ಬದಲಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು. ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಅವರ ನಿಷ್ಠಾವಂತ ಬೆಂಬಲಿಗರು ಎಂದೇ ಗುರುತಿಸಿಕೊಂಡಿದ್ದಾರೆ.
75 ವರ್ಷ ವಯಸ್ಸಿನ ಮಾಜಿ ಮುಖ್ಯಮಂತ್ರಿ, ಈ ಚುನಾವಣೆಯು ತಾನು ಸ್ಪರ್ಧಿಸುವ ಕೊನೆಯ ಚುನಾವಣೆ ಎಂದು ಘೋಷಿಸಿದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ರಾಜ್ಯದಾದ್ಯಂತ ಸಾಗುತ್ತಿದ್ದಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ. ಆದರೆ, ಹೈಕಮಾಂಡ್ ಅದಕ್ಕೆ ಸಮ್ಮತಿ ನೀಡುವುದಿಲ್ಲ ಎನ್ನುವ ವರದಿ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು. ಸಿಎಂ ಆಯ್ಕೆ ಪ್ರಜಾಸತ್ತಾತ್ಮಕ ಪ್ರಕ್ರಿಯೆ, ನಾನು ಸಿಎಂ ಆಕಾಂಕ್ಷಿ ಮತ್ತು ಅವರು (ಡಿಕೆ ಶಿವಕುಮಾರ್) ಆಕಾಂಕ್ಷಿ ಎಂದು ನಾನು ಹೇಳಿದ್ದೇನೆ. ಆದರೆ, ಅವರು (ಮಾಧ್ಯಮಗಳು) ಹೇಳುತ್ತಿರುವುದು ಸುಳ್ಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಗ್ಗಟ್ಟಿನ ಹೋರಾಟದ ಅಗತ್ಯ ಉಭಯ ನಾಯಕರಲ್ಲಿ ಮೂಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದರೆ, ಹೆಚ್ಚಿನ ವಿಷಯಗಳಲ್ಲಿ ಅವರ ನಡುವೆ ಒಮ್ಮತ ಮೂಡದಿದ್ದರೂ, ಇಬ್ಬರೂ ಉನ್ನತ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ.
ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
Advertisement