
ಕಾಂಗ್ರೆಸ್ ಸೇರಿದ ಶಿವಲಿಂಗೇಗೌಡ
ಹಾಸನ: ಇತ್ತೀಚಿಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಸೀಕೆರೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಭಾನುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಇಂದು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಕೆಲವು ತಿಂಗಳಿಂದ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಶಿವಲಿಂಗೇಗೌಡ ಅವರು ಕಳೆದ ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸೇರ್ಪಡೆಯ ದಾರಿ ಸುಗಮ ಮಾಡಿಕೊಂಡಿದ್ದರು.
ಇದನ್ನು ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ 2023: ಜೆಡಿಎಸ್ ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆ
ಜೆಡಿಎಸ್ ನಿಂದ ಮೂರು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡ ಅವರು, 2008ರಲ್ಲಿ ಮೊದಲ ಬಾರಿ ವಿಧಾನಸಭೆ ಆಯ್ಕೆಯಾಗಿದ್ದರು, 2018ರ ಚುನಾವಣೆಯಲ್ಲಿ ಅರಸಿಕೆರೆ ವಿಧಾನಸಭೆ ಕ್ಷೇತ್ರದಲ್ಲಿ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ನಲ್ಲಿ ನಿರೀಕ್ಷಿತ ಮನ್ನಣೆ, ಸ್ಥಾನಮಾನ ಸಿಗದ ಕಾರಣ ಅವರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಈ ಬಾರಿ ಕಾಂಗ್ರೆಸ್ ನಿಂದಲೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಪಕ್ಷ ನಾಯಕರಾದ @siddaramaiah ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಇಂದು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಶಾಸಕರಾದ ಶಿವಲಿಂಗೇಗೌಡರು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. pic.twitter.com/oH1F5P4bfk
— Karnataka Congress (@INCKarnataka) April 9, 2023