ಕೊಳ್ಳೇಗಾಲ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ: ಭಿನ್ನಮತೀಯರ ಜೊತೆ ಸಿದ್ದು ಚರ್ಚೆ, ಒಗ್ಗಟ್ಟಿನಿಂದ ಕೆಲಸ ಮಾಡಲು ಸೂಚನೆ

ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೀಟು ಕಸಿದುಕೊಳ್ಳುವಂತೆ ಕಾಂಗ್ರೆಸ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೀಟು ಕಸಿದುಕೊಳ್ಳುವಂತೆ ಕಾಂಗ್ರೆಸ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕರಾದ ಎಸ್.ಜಯಣ್ಣ, ಜಿ.ಎನ್.ನಂಜುಂಡಸ್ವಾಮಿ ಅವರೊಂದಿಗೆ  ಚರ್ಚೆ ನಡೆಸಿದ ಸಿದ್ದರಾಮಯ್ಯ, ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.

ಕಾಂಗ್ರೆಸ್ ನಾಯಕರು ಎಲ್ಲಾ ಆಕಾಂಕ್ಷಿಗಳೊಂದಿಗೆ ಮಾತುಕತೆ ನಡೆಸಿದ್ದು, ವಯಸ್ಸಿನ ಕಾರಣದಿಂದ ಟಿಕೆಟ್ ನಿರಾಕರಿಸಲಾಗಿದೆ ಎಂದು ಜಯಣ್ಣ ಹೇಳಿದರು. ಸತತ ಆರು ಚುನಾವಣೆಯಲ್ಲಿ ಸೋತಿದ್ದ ಕೃಷ್ಣಮೂರ್ತಿ ಅವರ ಗೆಲುವಿಗೆ ಶ್ರಮಿಸುವುದಾಗಿ ಘೋಷಿಸಿದರು.

ಕೃಷ್ಣಮೂರ್ತಿ ಅವರು ಆತ್ಮಾವಲೋಕನ ಮಾಡಿ ಸೋಲಿಗೆ ಕಾರಣಗಳನ್ನು ತಿಳಿದುಕೊಳ್ಳಬೇಕು ಮತ್ತು ಮತ ವಿಭಜನೆಗೆ ಅವಕಾಶ ನೀಡದೆ ಪಕ್ಷದ ಎಲ್ಲಾ ಬಣಗಳನ್ನು ಒಗ್ಗೂಡಿಸಬೇಕು ಎಂದರು. ಬಿಜೆಪಿ ಶಾಸಕ ಎನ್‌.ಮಹೇಶ್‌ ಮೇಲೆ ಜನರಿಗೆ ನಂಬಿಕೆ ಇಲ್ಲ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.

ಕೊಳ್ಳೇಗಾಲದಲ್ಲಿ ಪಕ್ಷದ ಟಿಕೆಟ್‌ಗಾಗಿ ಮೂವರು ಮಾಜಿ ಶಾಸಕರು ರೇಸ್‌ನಲ್ಲಿದ್ದು, ಅಭ್ಯರ್ಥಿಯನ್ನು ಘೋಷಿಸುವ ಮೊದಲು ಹೈಕಮಾಂಡ್ ಮೂವರ ಜೊತೆ ಮಾತುಕತೆ ನಡೆಸಬೇಕಿತ್ತು ಎಂದು ಕೃಷ್ಣಮೂರ್ತಿ ಹೇಳಿದರು.

ಇದರಿಂದ  ಗೊಂದಲ ಮೂಡಿತ್ತು, ಸಿದ್ದರಾಮಯ್ಯ ಅವರೇ ಬಗೆಹರಿಸಿದ್ದಾರೆ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಮತ್ತು ಜಯಣ್ಣ ಅವರ ಸಲಹೆ ಸೂಚನೆಗಳನ್ನು ಸ್ವೀಕರಿಸುತ್ತೇವೆ, ನಿಮ್ಮ ಸೇವೆ ಮಾಡಲು ನನಗೆ ಅವಕಾಶ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಕೃಷ್ಣಮೂರ್ತಿ ಹೇಳಿದರು. ಮಾಜಿ ಶಾಸಕ ಎಸ್.ಬಾಲರಾಜ್ ಗೈರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com