ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ
ಶಿರಸಿ: ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಭಾನುವಾರ ರಾಜೀನಾಮೆ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ, ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಟಿಕೆಟ್ ಪ್ರಕಟವಾಗದಿದ್ದರಿಂದ ಆಕ್ರೋಶಗೊಂಡಿರುವ ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅನಂತರ ಪಕ್ಷಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರು ಅಖಂಡ ಪರವಿದ್ದು, ಡಿಕೆಶಿಯವರು ಬೇರೆಯವರಿಗೆ ಟಿಕೆಟ್ ಕೊಡಬೇಕೆಂದಿದ್ದಾರೆ. ಈ ಕಾರಣದಿಂದ ಅಖಂಡ ಅವರು ಪಕ್ಷ ತೊರೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಧೋರಣೆಯೇ ಕಾರಣ ಎಂದು ಅಲ್ಪಸಂಖ್ಯಾತ ಮುಖಂಡರು ಆರೋಪಿಸಿದ್ದು, ಅವರಿಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪುಲಕೇಶಿನಗರ ಟಿಕೆಟ್ ಘೋಷಣೆ ಗೊಂದಲದ ಗೂಡಾಗಿದೆ. ಈ ಬೆಳವಣಿಗೆಯಿಂದ ಬೇಸತ್ತಿರುವ ಅಖಂಡ ಶ್ರೀನಿವಾಸ ಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ