ನಾನು 40% ಕಮಿಷನ್ ಹೊಡೆದಿಲ್ಲ: ಸಂಸದೆ ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ತಿರುಗೇಟು

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಹಣ ಪಡೆದು ಬಿ-ಫಾರಂ ನೀಡಲಾಗಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಹಣ ಪಡೆದು ಬಿ-ಫಾರಂ ನೀಡಲಾಗಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಶೇ. 40 ಕಮಿಷನ್ ಹೊಡೆದಿಲ್ಲ, ಅಭ್ಯರ್ಥಿಗಳ ಟಿಕೆಟ್ ಅರ್ಜಿಗೆ ಹಣ ಪಡೆದಿದ್ದೇವೆ.ಕಟ್ಟಡ ನಿಧಿ ಎಂದು ಪಡೆದಿದ್ದೇವೆ. ನಿಮ್ಮ ಶೇ. 40 ಕಮಿಷನ್ ಗೆ ಹಲವು ಸಾಕ್ಷ್ಯಗಳು ಸಿಕ್ಕಿವೆ. ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವೇ ಇದಕ್ಕೆ ಸಾಕ್ಷಿ ಎಂದರು. 

ಇನ್ನೂ ಡಿಕೆ ಶಿವಕುಮಾರ್  ಸಿದ್ದರಾಮಯ್ಯ, ಖರ್ಗೆ ಅವರನ್ನು ಎಂಬಿ ಪಾಟೀಲ ಮುಗಿಸುತ್ತಾರೆ ಎಂಬ ಶೋಭ ಕರಂದ್ಲಾಜೆ ಹೇಳಿಕೆ ಬಗ್ಗೆ ಮಾತನಾಡಿದ ಡಿಕೆಶಿ, ಬಿಎಸ್ ಯಡಿಯೂರಪ್ಪ ಅವರನ್ನು ಮುಗಿಸಲು ಶೋಭಾ ಕರಂದ್ಲಾಜೆನೇ ಸೇರಿಕೊಂಡು ಅವರ ಪಕ್ಷದಲ್ಲಿ ಏನೇನು ಮಾಡಿದರು ಎಂಬುದು ಗೊತ್ತಿದೆ. ನಮ್ಮ ವಿಷಯಕ್ಕೆ ಬಂದರೆ ಯಡಿಯೂರಪ್ಪ ಅವರನ್ನು ಮುಗಿಸಲು ಏನೇನು ಯೋಜನೆ ರೂಪಿಸಿದರು ಎನ್ನುವುದನ್ನು ಬಿಚ್ಚಿಡ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡುವುದರ ಜೊತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ನೀಡಿದ್ದರು. 

ನನ್ನ ನಾಮಪತ್ರ ತಿರಸ್ಕೃತ ಆಗಬೇಕೆಂದು ಬಿಜೆಪಿ, ಮುಖ್ಯಮಂತ್ರಿ ಕಚೇರಿ ಮತ್ತು ಕಾನೂನು ಘಟಕ ಷಡ್ಯಂತ್ರ ರೂಪಿಸಿದ್ದವು ಎಂದು ಡಿಕೆ ಶಿವಕುಮಾರ್ ಆರೋಪಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com