ಕಾಂಗ್ರೆಸ್ ಅಧಿಕಾರಕ್ಕೆ ಬರಲು 'ಧರ್ಮ'ವನ್ನು ಬಳಸಿಕೊಳ್ಳುತ್ತಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಾಂಗ್ರೆಸ್ ಅಧಿಕಾರಕ್ಕೆ ಬರಲು 'mazhab' (ಉರ್ದುವಿನಲ್ಲಿ ಧರ್ಮ ಎಂದರ್ಥ) ಅನ್ನು ಬಳಸಿಕೊಳ್ಳುತ್ತಿದೆ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬರಲು 'mazhab' (ಉರ್ದುವಿನಲ್ಲಿ ಧರ್ಮ ಎಂದರ್ಥ) ಅನ್ನು ಬಳಸಿಕೊಳ್ಳುತ್ತಿದೆ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ತನ್ನ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಧರ್ಮದ ಆಧಾರದ ಮೇಲೆ ಶೇ 4ರಷ್ಟು ಮೀಸಲಾತಿಯನ್ನು ನೀಡಿದ್ದಕ್ಕಾಗಿ ಪಕ್ಷವನ್ನು ಟೀಕಿಸಿದ ಸಿಂಗ್, ಇದನ್ನು ಮುಸ್ಲಿಮರನ್ನು ಸಮಾಧಾನಪಡಿಸಲು ಮಾತ್ರ ಮಾಡಲಾಗಿದೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷವು ಅಧಿಕಾರಕ್ಕಾಗಿ ಧರ್ಮದ ಬೆಂಬಲವನ್ನು ಪಡೆದಿದ್ದರೆ, ಅದು ಕಾಂಗ್ರೆಸ್ ಆಗಿರುತ್ತದೆ. ಕಾಂಗ್ರೆಸ್ ಪಕ್ಷವು ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ರಾಜಕೀಯವನ್ನು ಮಾಡುತ್ತದೆ. ಈ ರೀತಿಯ ರಾಜಕೀಯ ಎಂದಿಗೂ ಮಾಡಬಾರದು. ಕೇವಲ ಮುಸ್ಲಿಮರನ್ನು ಓಲೈಸಲು ಧಾರ್ಮಿಕ ನೆಲೆಯಲ್ಲಿ ಶೇ 4ರಷ್ಟು ಮೀಸಲಾತಿ ನೀಡಲಾಗಿದೆ ಎಂದು ಟೀಕಿಸಿದರು.
ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಸಮುದಾಯದವರು ಮೀಸಲಾತಿ ಪ್ರಯೋಜನಗಳನ್ನು ಪಡೆದರೆ ನಾವು ಸ್ವಾಗತಿಸುತ್ತೇವೆ. ಆದರೆ, ಭಾರತದ ಸಂವಿಧಾನವು ಧರ್ಮ ಆಧಾರಿತ ಮೀಸಲಾತಿಗೆ ಅನುಮತಿ ನೀಡುವುದಿಲ್ಲ ಎಂದು ರಕ್ಷಣಾ ಸಚಿವರು ಹೇಳಿದರು.

ಮಾದರಿ ನೀತಿ ಸಂಹಿತೆ ಜಾರಿಯಾಗುವ ಕೆಲವೇ ದಿನಗಳ ಮೊದಲು, ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ತೀರ್ಮಾನ ಕೈಗೊಂಡಿತು. ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಿದ್ದ ಶೇ 4ರಷ್ಟು ಮೀಸಲಾತಿಯನ್ನು ಈಗ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ 2ಸಿ ಅಡಿ ಬರುವ ಒಕ್ಕಲಿಗರು ಮತ್ತು ಇತರ ಸಮುದಾಯಗಳಿಗೆ ಹಾಗೂ ಪ್ರವರ್ಗ 2ಡಿ ಅಡಿ ಬರುವ ವೀರಶೈವ ಲಿಂಗಾಯತ ಮತ್ತು ಇತರ ಸಮುದಾಯಗಳಿಗೆ ಹಂಚಿಕೆ ಮಾಡಲಾಗಿದೆ.

ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು. 

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ವಿವಿಧ ಮುಸ್ಲಿಂ ಸಂಸ್ಥೆಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದು, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಆದೇಶವನ್ನು ಮೇ 9 ರವರೆಗೆ ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.

'ಇಡೀ ಜಗತ್ತಿಗೆ ತಿಳಿದಿರುವಂತೆ ಬಿಜೆಪಿಯ ಪಾತ್ರದ ಬಗ್ಗೆ 'ಮರೆಮಾಚಲು ಏನೂ ಇಲ್ಲ'. ಬಿಜೆಪಿ ಎಂದಿಗೂ ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದರಲ್ಲಿ ನಂಬಿಕೆಯನ್ನಿಟ್ಟಿಲ್ಲ. ಬಿಜೆಪಿಯು ನ್ಯಾಯ ಮತ್ತು ಮಾನವೀಯತೆಯಲ್ಲಿ ನಂಬಿಕೆ ಇಟ್ಟಿದೆ. 12ನೇ ಶತಮಾನದ ಕರ್ನಾಟಕ ಸಮಾಜ ಸುಧಾರಕ ಬಸವೇಶ್ವರರ ತತ್ವಗಳನ್ನು ಬಿಜೆಪಿ ಅನುಸರಿಸಿದೆ ಎಂದು ಅವರು ಹೇಳಿದರು.

ಬಸವೇಶ್ವರರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಭಾರತದಲ್ಲಿ ಬಿಜೆಪಿ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತ ನೀಡುವಂತೆ ಸಿಂಗ್ ಕರ್ನಾಟಕದ ಜನತೆಗೆ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com