ನಾಳೆ ಕಾಂಗ್ರೆಸ್ ಸಭೆ; ಸಚಿವರು, ಶಾಸಕರು-ಸಂಸದರು ಸೇರಿ 50 ನಾಯಕರು ದೆಹಲಿಗೆ ಪ್ರಯಾಣ: ಡಿ.ಕೆ ಶಿವಕುಮಾರ್

2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ 50 ಕಾಂಗ್ರೆಸ್ ನಾಯಕರು ಮತ್ತು ಸಚಿವರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ 50 ಕಾಂಗ್ರೆಸ್ ನಾಯಕರು ಮತ್ತು ಸಚಿವರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ದೆಹಲಿಗೆ ತೆರಳುವ ಮೊದಲು ಮಾತನಾಡಿದ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಯೋಜನೆಗಳ ಬಗ್ಗೆ ಚರ್ಚಿಸಲು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

ನಾಳೆ ದೆಹಲಿಯಲ್ಲಿ ಸಭೆ ಇದೆ, ಇಂದು ನಾನು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಪಕ್ಷದ ಕೆಲಸ, ಸರ್ಕಾರಿ ಕೆಲಸವೂ ಇದೆ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ದೆಹಲಿಯಲ್ಲಿ ರಾಜ್ಯ ಸಚಿವರು ಮತ್ತು ನಾಯಕರ ಜೊತೆಗಿನ ಪಕ್ಷದ ಸಭೆಯಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಚುನಾವಣೆಗೆ ಮುನ್ನ ಕಾಂಗ್ರೆಸ್ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುದರ ಬಗ್ಗೆ ಚರ್ಚಿಸಿ ಕಾರ್ಯತಂತ್ರ ರೂಪಿಸುವುದಾಗಿ ಹೇಳಿದರು.

ಸಚಿವರು ಹಾಗೂ ಕೆಲ ಶಾಸಕರು ಮಾತ್ರವಲ್ಲದೆ ಸುಮಾರು 8-10 ಮಂದಿ ಶಾಸಕರಲ್ಲದ ಹಿರಿಯ ನಾಯಕರನ್ನು ಸಭೆಗೆ ಕರೆಯಲಾಗಿದೆ. ಅಲ್ಲದೆ, ಸಂಸದರಿಗೂ ಆಹ್ವಾನ ನೀಡಲಾಗಿದೆ.ಒಟ್ಟು ಸುಮಾರು 50 ಜನರು, ಮತ್ತು ಅವರು ಮೂರು ತಂಡಗಳಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.

ಆಡಳಿತ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗಿನ ಸಭೆ ಮಹತ್ವದ್ದಾಗಿದ್ದು, ಸುಮಾರು 30 ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ವರಿಷ್ಠರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಯಲಿದೆ. ಚುನಾವಣೆ ರಣತಂತ್ರ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ ಶಾಸಕರ ಅಸಮಾಧಾನದ ಬಗ್ಗೆಯೂ ಚರ್ಚೆಯಾಗಲಿದೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸರ್ಕಾರದ ಹಲವು ಸಚಿವರು ಆಡಳಿತ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com