ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಮೈಸೂರಿಗೆ ಸ್ಥಳಾಂತರ: ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ

ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮವನ್ನ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸುವುದರ ಕುರಿತು ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮವನ್ನ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸುವುದರ ಕುರಿತು ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ಬೆಳಗಾವಿಯಲ್ಲಿ ಯೋಜನೆ ಚಾಲನೆಗೆ ಸಿದ್ಧತೆ ನಡೆಸುವಂತೆ ತಿಳಿಸಲಾಗಿತ್ತು. ಇದರಂತೆ ಸಿದ್ಧತೆಗಳನ್ನು ಆರಂಭಿಸಲಾಗಿತ್ತು, ಆದರೆ ಈಗ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಾರ್ಯಕ್ರಮದ ವೇಳಾಪಟ್ಟಿ ಮತ್ತು ಸ್ಥಳವನ್ನು ಪ್ರಕಟಿಸಿದ್ದರು. ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಹೈಕಮಾಂಡ್ ಕಾರಣ ನೀಡಬೇಕು ಎಂದು ತಿಳಿಸಿದರು.

‘ಗೃಹಲಕ್ಷ್ಮಿ ಯೋಜನೆ ಸ್ಥಳಾಂತರಕ್ಕೆ ನಾನು ಕಾರಣ ಕೊಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ನಿಗದಿಪಡಿಸಿದ್ದಾರೆ. ಅಲ್ಲಿಂದ ಅವರಿಗೆ ಆಗಮಿಸಲು ಅನುಕೂಲವಾಗಲೆಂದು ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ನಮಗೆ ತಿಳಿಸಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಚ್ಚಿನ ಪ್ರತಿಕ್ರಿಯೆ ನೀಡಬಹುದು’ ಎಂದರು.

‘ಬಿಜೆಪಿ ಮತ್ತು ಜೆಡಿಎಸ್‌ನ ಹಲವು ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ರಾಜ್ಯಮಟ್ಟದ ನಾಯಕರೊಂದಿಗೆ ಮಾತುಕತೆ ನಡೆಯುತ್ತಿರುವುದರಿಂದ, ಯಾರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾಹಿತಿ ನನಗಿಲ್ಲ. ಜಿಲ್ಲೆಯ ಯಾವೊಬ್ಬ ಬಿಜೆಪಿ ನಾಯಕರು ಸದ್ಯ ಕಾಂಗ್ರೆಸ್‌ಗೆ ಬರುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಉನ್ನತ ಸ್ಥಾನದಲ್ಲಿರುವ ನಾಯಕರನ್ನು ಬಿಜೆಪಿಯತ್ತ ಸೆಳೆಯುವುದಾಗಿ ಸಿ.ಟಿ.ರವಿ ನೀಡಿದ ಹೇಳಿಕೆ ತಳ್ಳಿಹಾಕಿದ ಅವರು, ‘ಈಗ ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ. ನಮ್ಮ ಪಕ್ಷವೇ ವಿರೋಧ ಪಕ್ಷದ ಶಾಸಕರನ್ನು ಬೇಟೆಯಾಡುವ ಸ್ಥಿತಿಯಲ್ಲಿದೆ’ ಎಂದು ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com