ನಾಳೆಯಿಂದ ಕಾಂಗ್ರೆಸ್ ಬಸ್ ಯಾತ್ರೆ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವ

ವಿಧಾನಸಭೆ ಚುನಾವಣೆ ಪೂರ್ವತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ನಾಳೆಯಿಂದ 20 ದಿನಗಳ ಪ್ರಜಾಧ್ವನಿ ರಥಯಾತ್ರೆ ಆರಂಭಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪ್ರವಾಸ ತೆರಳಲಿದ್ದಾರೆ.
ಸಿದ್ದರಾಮಯ್ಯ ಬಸ್ ಯಾತ್ರೆ
ಸಿದ್ದರಾಮಯ್ಯ ಬಸ್ ಯಾತ್ರೆ

ಬೆಂಗಳೂರು: ವಿಧಾನಸಭೆ ಚುನಾವಣೆ ಪೂರ್ವತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ನಾಳೆಯಿಂದ 20 ದಿನಗಳ ಪ್ರಜಾಧ್ವನಿ ರಥಯಾತ್ರೆ ಆರಂಭಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪ್ರವಾಸ ತೆರಳಲಿದ್ದಾರೆ.

ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ  ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿಯ ಪಾಪದ ಪುರಾಣ ಎಂಬ ದೋಷಾರೋಪಣಾ ಪಟ್ಟಿಯನ್ನು ಬಿಡುಗಡೆ ಮಾಡಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಬಸ್ ಯಾತ್ರೆಗೆ ಎರಡು ಗುಂಪುಗಳು ರಚನೆಯಾಗಲಿವೆ. ಒಂದು ಗುಂಪು ನನ್ನ ನೇತೃತ್ವದಲ್ಲಿ ಮತ್ತೊಂದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ. ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಯಾತ್ರೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅಂತೆಯೇ ಇದೇ ವೇಳೆ ಬಿಜೆಪಿ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದೇವೆ ಎಂದ ಅವರು, ಬಿಜೆಪಿಯವರು ಅನೈತಿಕ ಮಾರ್ಗಗಳ ಮೂಲಕ ಸರ್ಕಾರ ರಚಿಸಿದರು. ಹೀಗಾಗಿ ಬೆಳಗಾವಿಯಿಂದ ಆರಂಭಗೊಂಡು ಎಲ್ಲಾ ಜಿಲ್ಲೆಗಳಲ್ಲಿ ಬಸ್ ಯಾತ್ರೆ ಕೈಗೊಳ್ಳಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.  

ಬಳಿಕ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಮಹಾತ್ಮಗಾಂಧಿ ಬೆಳಗಾವಿಯಲ್ಲಿ ತಂಗಿದ್ದ ಗಾಂಬಾವಿಯಿಂದ ನಾಳೆ ಪ್ರಜಾಧ್ವನಿ ರಥಯಾತ್ರೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ನಾನು ಮತ್ತು ಸಿದ್ದರಾಮಯ್ಯ ಜೊತೆಯಾಗಿ 20 ಜಿಲ್ಲೆಗಳಲ್ಲಿ ಸಂಚರಿಸಲಿದ್ದೇವೆ. ಜನವರಿ 28ರವರೆಗೆ ನಿರಂತರವಾಗಿ ರಥಯಾತ್ರೆ ನಡೆಯಲಿದೆ. ಬಳಿಕ ನಾವಿಬ್ಬರು ಪ್ರತ್ಯೇಕ ತಂಡಗಳಲ್ಲಿ ಕ್ಷೇತ್ರವಾರು ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು. 

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‍ನಲ್ಲಿ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರಿಯಾಂಕ ಖರ್ಗೆ, ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಡಿ.ಕೆ.ಶಿವಕುಮಾರ್ ರಥಯಾತ್ರೆಗೆ ಬಳಸಿಕೊಳ್ಳುವ ಬಸ್ ಅನ್ನು ಪರಿಶೀಲಿಸಿದರು. ಕಾರ್ಯಕ್ರಮದಲ್ಲಿ ಪ್ರಜಾಧ್ವನಿ ಯಾತ್ರೆಯ ಲಾಂಛನವನ್ನು ಬಿಡುಗಡೆ ಮಾಡಲಾಯಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com