ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ತಡೆಯಲು ಮೋದಿಯಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಅಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.
ಬಾಗಲಕೋಟೆಯಲ್ಲಿ ಬುಧವಾರ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್.
ಬಾಗಲಕೋಟೆಯಲ್ಲಿ ಬುಧವಾರ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್.

ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಅಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, 2023 ರ ಚುನಾವಣೆಯಲ್ಲಿ ಕಾಂಗ್ರೆಸ್ 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮ ಗೆಲವನ್ನು ಮೋದಿ ಕೂಡ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳಿಕ ಅಲೆಮಾರಿ’ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ನನ್ನನ್ನು ಅಲೆಮಾರಿ ಎನ್ನುತ್ತಾರೆ, ಆದರೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ನರೇಂದ್ರ ಮೋದಿ ಬಿಜೆಪಿಗೆ ಜನಪ್ರಿಯ ನಾಯಕರಾಗಿದ್ದಾರೆ. ನಾನು ಜನಪ್ರಿಯ ನಾಯಕನಲ್ಲವೇ? ನೀವು ಚುನಾವಣೆಗೆ ಸ್ಪರ್ಧಿಸಿದಾಗ ಜನರ ಬೆಂಬಲ ಮುಖ್ಯವೇ ಹೊರತು, ಎಷ್ಟು ಕ್ಷೇತ್ರಗಳಿಂದ ಸ್ಪರ್ಧಿಸುತ್ತೀರಿ ಎಂಬುದು ಮುಖ್ಯವಲ್ಲ ಎಂದು ತಿಳಿಸಿದರು.

ಇದೇ ವೇಳೆ ಸ್ಯಾಂಟ್ರೋ ರವಿ ಪ್ರಕರಣ ಕುರಿತು ಮಾತನಾಡಿ, ಹಲವಾರು ಸಚಿವರು, ಶಾಸಕರು ಮತ್ತು ಗೃಹ ಸಚಿವರು ಶಾಮೀಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ಯತ್ನಾಳ್ ಅವರು ಕೆಲವೊಮ್ಮೆ ಅರ್ಥಪೂರ್ಣವಾಗಿ ಮಾತನಾಡುತ್ತಾರೆ. ಹೀಗಾಗಿಯೇ ಕೇಂದ್ರ ಬಿಜೆಪಿ ನಾಯಕತ್ವವು ಅವರ ಬೆನ್ನಿಗೆ ನಿಲ್ಲುತ್ತದೆ. ಬಿಜೆಪಿ ನಾಯಕರು ಯತ್ನಾಳ್ ವಿರುದ್ಧ ವರ್ತಿಸುತ್ತಿಲ್ಲ, ಏಕೆಂದರೆ ಎಲ್ಲಿ ತಮ್ಮ ಗುಟ್ಟು ಬಯಲಾಗುವುದೋ ಎಂಬ ಭಯ ಅವರಿಗಿದೆ ಎಂದು ವ್ಯಂಗ್ಯವಾಡಿದರು.

ಆಡಳಿತ ನಡೆಸುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ: ಡಿಕೆ.ಶಿವಕುಮಾರ್
ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಬೊಮ್ಮಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ದಯನೀಯವಾಗಿ ವಿಫಲವಾಗಿರುವ ಕಾರಣ ಬಿಜೆಪಿ 2023 ರ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಎದುರಿಸಬೇಕಾಗಿದೆ ಎಂದು ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಅದಕ್ಕೆ ರಾಷ್ಟ್ರೀಯ ನಾಯಕರ ಅಗತ್ಯವಿದೆ. ಬಿಜೆಪಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಗಗನಕ್ಕೇರುತ್ತಿರುವ ಬೆಲೆಗಳನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಆಕಾಂಕ್ಷಿಗಳಿಗೆ ಪಕ್ಷದ ಟಿಕೆಟ್ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಫೆಬ್ರವರಿ 2 ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಒಬ್ಬ ಅಭ್ಯರ್ಥಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು ಎಂಬುದರ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com