ಶೀಘ್ರವೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ 40 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜನಾರ್ದನ ರೆಡ್ಡಿ
ಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ...
Published: 20th January 2023 09:04 PM | Last Updated: 21st January 2023 01:29 PM | A+A A-

ಜನಾರ್ದನ ರೆಡ್ಡಿ
ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್ಪಿಪಿ)ದ 40 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ, ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಗಂಗಾವತಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜನಾರ್ದನ ರೆಡ್ಡಿ, ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಲ್ಯಾಣ ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಬ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.
ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲುವ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಪಕ್ಷದ ಟಿಕೆಟ್ ನೀಡಲಾಗುವುದು. ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದ ಅವರು, ಕೆಆರ್ಪಿಪಿ ಅಭ್ಯರ್ಥಿಗಳು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಂದಿನ ಕೆಲವೇ ದಿನಗಳಲ್ಲಿ ನಮ್ಮ ಅಭ್ಯರ್ಥಿಗಳು ಎಲ್ಲೆಲ್ಲಿ ಗೆಲ್ಲಬಹುದು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು 40 ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದೇವೆ. ನಮ್ಮ ಉದ್ದೇಶ ಚುನಾವಣೆಯಲ್ಲಿ ಬೇರೆ ಪಕ್ಷಗಳನ್ನು ಸೋಲಿಸುವುದಲ್ಲ, ನಮ್ಮ ಅಭ್ಯರ್ಥಿಗಳನ್ನು ಗೆಲುವಿನ ದಡ ಸೇರಿಸುವುದಾಗಿದೆ. ಈಗಾಗಲೇ ರಾಜ್ಯದ 30ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಸಮೀಕ್ಷೆ ಮಾಡಿಸುತ್ತಿದ್ದೇವೆ. ಸಮೀಕ್ಷೆ ಫಲಿತಾಂಶ ನೋಡಿಕೊಂಡು ಟಿಕೆಟ್ ಘೋಷಣೆ ಮಾಡಲಿದ್ದೇವೆ ಎಂದರು.