ಸಿದ್ದರಾಮಯ್ಯ ಪರ ಪ್ರಚಾರ: ಕೋಲಾರಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ, ಮಿಶ್ರ ಪ್ರತಿಕ್ರಿಯೆ
ತಮ್ಮ ತಂದೆ ಪರ ಪ್ರಚಾರಕ್ಕೆಂದು ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಮೊದಲ ಬಾರಿಗೆ ಕೋಲಾರಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Published: 31st January 2023 01:22 PM | Last Updated: 31st January 2023 05:04 PM | A+A A-

ಯತೀಂದ್ರ ಸಿದ್ದರಾಮಯ್ಯ.
ಕೋಲಾರ: ತಮ್ಮ ತಂದೆ ಪರ ಪ್ರಚಾರಕ್ಕೆಂದು ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಮೊದಲ ಬಾರಿಗೆ ಕೋಲಾರಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೋಲಾರಕ್ಕೆ ಯತೀಂದ್ರ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮತ್ತು ಅವರ ಬೆಂಬಲಿಗರಿಂದ ಯಾವುದೇ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗಲಿಲ್ಲ. ಆದರೆ, ಮತ್ತೊಬ್ಬ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರ ಬೆಂಬಲಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯತೀಂದ್ರ ಅವರಿಗೆ ರಮೇಶ್ ಕುಮಾರ್ ಅವರ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಯತೀಂದ್ರ ಅವರು ಕೋಲಾರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಎಂಎಲ್ಸಿಗಳಾದ ಅನಿಲ್ ಕುಮಾರ್, ನಜೀರ್ ಅಹಮದ್ ಮತ್ತಿತರ ಮುಖಂಡರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ರಮೇಶ್ ಕುಮಾರ್ ಅವರ ಬೆಂಬಲಿಗರು ಭಾಗವಹಿಸಿದ್ದರು.
ಕೋಲಾರಕ್ಕೆ ಭೇಟಿ ನೀಡಿದ ಯತೀಂದ್ರ ಅವರು, ಕೋಲಾರದ ಪ್ರಸಿದ್ಧ ಕೋಲಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಯತೀಂದ್ರ ಅವರು ಸಿದ್ದರಾಮಯ್ಯ ಅವರು ತಂಗಿದ್ದ ಬಸವನಾಥ ಗ್ರಾಮದ ಮನೆಗೆ ಭೇಟಿ ನೀಡಿದರು.
ಇದನ್ನೂ ಓದಿ: ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
ನಂತರ ಬಸವನಾಥ, ಕೋಡಿರಾಮ ಸಂದ್ರ ಮತ್ತು ಕಲ್ಲಿಪುರದಲ್ಲಿ ನಡೆದ ಸಭೆಗಳನ್ನುದ್ದೇಶಿಸಿ ಯತೀಂದ್ರ ಅವರು ಮಾತನಾಡಿದರು. ಅಲ್ಪಸಂಖ್ಯಾತ ಸಮುದಾಯದ ಜನರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯತೀಂದ್ರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಅವರು, ನನ್ನ ತಂದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ, ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತದ ಬೆಳವಣಿಗೆ ಕುರಿತು ಮುನಿಯಪ್ಪ ಅವರ ಬೆಂಬಲಿಗರು ಮಾತನಾಡಿ, ಕೋಲಾರದಲ್ಲಿ ಯತೀಂದ್ರ ಅವರ ಕಾರ್ಯಕ್ರಮಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕಾರ್ಯಕ್ರಮದ ಕುರಿತು ಪಕ್ಷದ ಹಿರಿಯ ನಾಯಕರು ಕಾರ್ಯಕರ್ತರಿಗೆ ಯಾವುದೇ ಸೂಚನೆಗಳನ್ನು ನೀಡಿರಲಿಲ್ಲ ಎಂದು ಹೇಳಿದ್ದಾರೆ.