ಬಿಜೆಪಿ ಸರ್ಕಾರ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ: ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ

ಪಿಎಸ್ ಐ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮತ್ತು ಬಿಟ್ ಕಾಯಿನ್ ಹಣ ವರ್ಗಾವಣೆ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಿಧ ಹಗರಣಗಳ ತನಿಖೆ ಕುರಿತು ವಿಶೇಷ ತನಿಖಾ ತಂಡ, ವಿಶೇಷ ಕಾರ್ಯಪಡೆ ರಚಿಸುವ ಕುರಿತು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
ಸಿಎಂ ಸಿದ್ದರಾಮಯ್ಯ ಮತ್ತಿತರರ ಸಾಂದರ್ಭಿಕ ಚಿತ್ರ
ಸಿಎಂ ಸಿದ್ದರಾಮಯ್ಯ ಮತ್ತಿತರರ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪಿಎಸ್ ಐ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮತ್ತು ಬಿಟ್ ಕಾಯಿನ್ ಹಣ ವರ್ಗಾವಣೆ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಿಧ ಹಗರಣಗಳ ತನಿಖೆ ಕುರಿತು ವಿಶೇಷ ತನಿಖಾ ತಂಡ, ವಿಶೇಷ ಕಾರ್ಯಪಡೆ ರಚಿಸುವ ಕುರಿತು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.

ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಇದು ಕೂಡಾ ಒಂದಾಗಿದೆ. ಆರ್‌ಡಿಪಿಆರ್ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ತನಿಖೆಯ ಪರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾಸ್ತವವಾಗಿ, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಖರ್ಗೆ, ತನಿಖೆಯ ಪ್ರಚಾರವನ್ನು ಮುಂದುವರೆಸಿದ್ದಾರೆ. ಆರ್‌ಡಿಪಿಆರ್ ಸಚಿವರಾಗಿ, ಕೇಂದ್ರ ಸರ್ಕಾರ ಪುರಸ್ಕೃತ ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕಾಮಗಾರಿ ಪಡೆಯಲು  ಶೇ.40ರಷ್ಟು ಕಮಿಷನ್ ಕೊಡಬೇಕಾಗಿತ್ತು ಎಂದು ಆರೋಪಿಸಿರುವ ಗುತ್ತಿಗೆದಾರರ ಸಂಘದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಾಕ್ಷ್ಯಾಧಾರಗಳನ್ನು ನೀಡುವುದಾಗಿ ಹೇಳಿದ್ದರು. ಕಮಿಷನ್ ಹಗರಣದ ತನಿಖೆಗೆ ಆದೇಶಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್  ಈಗಾಗಲೇ ಎಲ್ಲ ಹಗರಣಗಳ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ಕುರಿತು ಎಫ್‌ಐಆರ್‌ ದಾಖಲಾಗಿದ್ದವು ಮತ್ತು ಆಗ ಎಡಿಜಿಪಿ (ನೇಮಕಾತಿ) ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಸೇರಿದಂತೆ ಹಲವಾರು ಅಧಿಕಾರಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಪ್ರಕರಣಗಳನ್ನು ಮುಂದಕ್ಕೆ ಕೊಂಡೊಯ್ಯುವ ಜವಾಬ್ದಾರಿಯನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಹಗರಣಗಳ ತನಿಖೆಯು ಪಕ್ಷದ ನಿರ್ಧಾರವಾಗಿದೆ ಮತ್ತು ನಾವು ಅದರ ಬಗ್ಗೆ ದೃಢವಾಗಿರುತ್ತೇವೆ ಎಂದು ಅವರು ಹೇಳಿದರು.

ಆದರೆ ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕರನ್ನು ಸೌಜನ್ಯಕ್ಕಾಗಿ ಭೇಟಿ ಮಾಡುತ್ತಿರುವ ಕಾಂಗ್ರೆಸ್ ಹಿರಿಯ ನಾಯಕರು ಈ ತನಿಖೆಗಳು ತಾರ್ಕಿಕ ಅಂತ್ಯ ತಲುಪುವ ಬಗ್ಗೆ ಅನುಮಾನ ಹುಟ್ಟುಹಾಕಿದರು. ಈ ತನಿಖೆ ಹಲವು ಪ್ರಮುಖ ನಾಯಕ ಬಿಟ್ಟು ಕೆಲವು ನಾಯಕರನ್ನು ಮಾತ್ರ ಗುರಿಯಾಗಿಸಿಕೊಳ್ಳುತ್ತವೆ ಎಂದು ಊಹಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಎಂದು ಆರೋಪಿಸುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ,  ಕಾಂಗ್ರೆಸ್ ಸರ್ಕಾರ ಎಲ್ಲಾ ಹಗರಣಗಳ ತನಿಖೆ ನಡೆಸಬೇಕೆಂದು ಸವಾಲ್ ಕೂಡಾ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com