ಬಿಜೆಪಿ ಶಾಸಕ ಮಾಡಾಳ್, ಪುತ್ರನ ಮೇಲಿನ ಲೋಕಾಯುಕ್ತ ದಾಳಿ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಜಗದೀಶ್ ಶೆಟ್ಟರ್

ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತರ ದಾಳಿ ಹಾಗೂ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಬಂಧನ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ ಶೆಟ್ಟರ್ ಭಾನುವಾರ ಹೇಳಿದರು.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಕಲಬುರಗಿ: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತರ ದಾಳಿ ಹಾಗೂ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಬಂಧನ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ ಶೆಟ್ಟರ್ ಭಾನುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದು, ಬಿಜೆಪಿಯದ್ದು ಶೇ.40 ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದಾರೆ. ಆರೋಪ ಮಾಡುತ್ತಿರುವ ಸಿದ್ದರಾಮಯ್ಯ ಅಥವಾ ಗುತ್ತಿಗೆದಾರರ ಸಂಘದ ಬಳಿ ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅವರು ಲೋಕಾಯುಕ್ತರ ಮೊರೆ ಹೋಗಬಹುದು. ನಮಗೆ ಅರ್ಕಾವತಿ ಬಡಾವಣೆ ಹಗರಣವೇ ಸಿದ್ದರಾಮಯ್ಯ ಎಷ್ಟು ಭ್ರಷ್ಟ ಎಂಬುದನ್ನು ತೋರಿಸಲು ಸಾಕಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಿಂದ ನಡೆದಿದೆ ಎನ್ನಲಾದ ಅರ್ಕಾವತಿ ಹಗರಣದ ತನಿಖೆಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಚಿಸಿದ್ದ ನ್ಯಾಯಮೂರ್ತಿ ಕೆಂಪಣ್ಣ ಆಯೋಗವು ಪತ್ತೆ ಮಾಡಿತ್ತು. ಹೈಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಯಾವುದೇ ಸಾಕ್ಷ್ಯಧಾರಗಳಿಲ್ಲದೆ ನಮ್ಮ ಮೇಲೆ ಆರೋಪ ಮಾಡುವಂತಿಲ್ಲ. ಬಿಜೆಪಿ ಶಾಸಕ ಮಾಡಾಳ್ ವೀರುಪಾಕ್ಷಪ್ಪ ಅವರ ನಿವಾಸದ ಮೇಲೆ ನಡೆದ ದಾಳಿ ವಿಚಾರವಾಗಿ ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ವಿಜಯ ಸಂಕಲ್ಪ ಯಾತ್ರೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಮಾರ್ಚ್ 2 ರಂದು ಪ್ರಾರಂಭವಾದ ‘ವಿಜಯ ಸಂಕಲ್ಪ ಯಾತ್ರೆ’ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಕಾರ್ಯಕ್ರಮಗಳು, ರೋಡ್ ಶೋಗಳು ಜನರನ್ನು ಆಕರ್ಷಿಸುತ್ತಿವೆ. ಕಾರ್ಯಕ್ರಮಗಳು ಮತ್ತು ರೋಡ್ ಶೋಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆಂದು ಹೇಳಿದರು.

ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ವಾಶ್ ಔಟ್ ಆಗಿದ್ದು, ಇತ್ತೀಚೆಗಷ್ಟೇ ನಡೆದ ಮೂರು ಈಶಾನ್ಯ ರಾಜ್ಯಗಳ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಜನರ ಚಿಂತನೆಗಳಿಗೆ ಸೂಚನೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಐಸಿಯುನಲ್ಲಿದೆ ಮತ್ತು ಮುಂದಿನ ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯವು ‘ಕಾಂಗ್ರೆಸ್ ಮುಕ್ತ’ವಾಗಲಿದೆ ಎಂದು ಭವಿಷ್ಯ ನುಡಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದರೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಈ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

ನಂತರ ಕಲಬುರಗಿ ನಗರದಲ್ಲಿ ನಡೆದ ರೋಡ್ ಶೋನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ರಾಜ್ಯ ಸಾರಿಗೆ ಸಚಿವ ಬಿ.ಶ್ರೀರಾಮಲು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com