ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕರನ್ನು ಸರ್ಕಾರ ರಕ್ಷಿಸುತ್ತಿದೆ: ಸಿದ್ದರಾಮಯ್ಯ ಆರೋಪ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ಆರೋಪಿಸಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ಆರೋಪಿಸಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಸರ್ಕಾರದ ವಿರುದ್ಧ ಪ್ರತಿಭಟಿಸಿ ಗುರುವಾರ ಬೆಳಗ್ಗೆ 9 ಗಂಟೆಯಿಂದ ಎರಡು ಗಂಟೆಗಳ ಕಾಲ ಮಾರುಕಟ್ಟೆ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ.

ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ರಸ್ತೆ-ರೈಲು ಸಾರಿಗೆ, ಶಿಕ್ಷಣ ಸಂಸ್ಥೆಗಳು, ಪರೀಕ್ಷೆಗಳು, ಆಸ್ಪತ್ರೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಶಾಸಕರ ನಿವಾಸದಿಂದ ವಶಪಡಿಸಿಕೊಂಡ 8 ಕೋಟಿ ರೂ. ರಾಜ್ಯ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಸಾಬೀತಾಗಿದೆ. ಶಾಸಕರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ, ಕೂಡಲೇ ಅವರನ್ನು ಬಂಧಿಸಬೇಕಿತ್ತು, ಆದರೆ, ಬಂಧನವಾಗಿಲ್ಲ. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸುವ ಮೂಲಕ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿದ್ದರು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಸಿಬಿ ರಚನೆ ಮಾಡಲ್ಗಿತ್ತು. ಅಧಿಕಾರಕ್ಕೆ ಬಂದ ಕೂಡಲೇ ಎಸಿಬಿ ರದ್ದುಪಡಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಮೂರು ವರ್ಷ ಅಧಿಕಾರದಲ್ಲಿದ್ದರೂ ಮಾಡಲಿಲ್ಲ. ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಲೋಕಾಯುಕ್ತವನ್ನು ಪುನರ್ ಸ್ಥಾಪಿಸಲಾಯಿತು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಗುಜರಾತ್ ಚುನಾವಣೆಯ ನಂತರ ರಾಜ್ಯದಲ್ಲಿ ಚುನಾವಣೆ ನಡೆಸಲು ಬಿಜೆಪಿ ತರಾತುರಿಯಲ್ಲಿದೆ, ಹೀಗಾಗಿ  ಹಣ ಸಂಗ್ರಹಿಸಲು ಅಲ್ಪಾವಧಿ ಟೆಂಡರ್ ಕರೆಯುವಲ್ಲಿ ನಿರತವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 140 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಬಳಿಕ ಅಧಿಕಾರಕ್ಕೆ ಬಂದರೆ ಎಲ್ಲ ಮನೆಗಳಿಗೂ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ನೀಡಿರುವ ಭರವಸೆಯ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದರು.

ಕಾಂಗ್ರೆಸ್ ಭರವಸೆ ಕುರಿತು ಪ್ರತಿಕ್ರಿಯೆ ನೀಡಿದ್ದ ಬೊಮ್ಮಾಯಿಯವರು, ಪಕ್ಷದ ಭರವಸೆ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದರು.

ಈ ನಡುವೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಅಂಟಿಸಿದ ಕಾಂಗ್ರೆಸ್‌. ಮಂಗಳವಾರ ‘ಕಾಣೆಯಾದ ಶಾಸಕ’ ಎಂದು ಪೋಸ್ಟರ್‌ ಅಂಟಿಸಿ ಅಭಿಯಾನ ಆರಂಭಿಸಿತ್ತು.

ಪೋಸ್ಟರ್ ಅಂಟಿಸಿದವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದಾರೆ. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಪೋಸ್ಟರ್ ಅಂಟಿಸುತ್ತಿರುವವರನ್ನು ಬಂಧಿಸಿ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com