ವಿಧಾನಸಭಾ ಚುನಾವಣೆ: 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕೆಪಿಸಿಸಿ, ಶೀಘ್ರದಲ್ಲೇ ಕೇಂದ್ರ ನಾಯಕತ್ವಕ್ಕೆ ರವಾನೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ನಾಯಕರು 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆಂದು ತಿಳಿದುಬಂದಿದೆ.
Published: 09th March 2023 08:31 AM | Last Updated: 09th March 2023 01:47 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ನಾಯಕರು 200 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆಂದು ತಿಳಿದುಬಂದಿದೆ.
ಮಂಗಳವಾರ ಮತ್ತು ಬುಧವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.
ಸಭೆಯಲ್ಲಿ 120 ಸ್ಥಾನಗಳಿಗೆ ಅಭ್ಯರ್ಥಿಗಳು ಬಹುತೇಕ ಅಂತಿಮಗೊಳಿಸಲಾಗಿದ್ದು, ಸುಮಾರು 75 ಸ್ಥಾನಗಳಲ್ಲಿ ಎರಡರಿಂದ ಮೂರು ಅಭ್ಯರ್ಥಿಗಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಲವು ಭಾಗಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇರುವುದರಿಂದ ಈ ಕುರಿತು ಇನ್ನು ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 140 ಸ್ಥಾನಗಳಲ್ಲಿ ಗೆಲುವು; ಸಮೀಕ್ಷೆಯಲ್ಲಿ ಬಹಿರಂಗ: ಡಿಕೆ ಶಿವಕುಮಾರ್
ಅಂತಹ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮಾರ್ಚ್ 27 ರ ನಂತರ ಚುನಾವಣೆ ಘೋಷಣೆಯಾದ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಶೇ.75 ರಷ್ಟು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ನಂತರ ಕೇಂದ್ರ ನಾಯಕರಿಗೆ ಪಟ್ಟಿಯನ್ನು ಕಳುಹಿಸಲಾಗುವುದು ಎಂದು ಹೇಳಿದರು.
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ 65 ಸ್ಥಾನಗಳನ್ನು ದಾಟುವುದಿಲ್ಲ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಊಹಾಪೋಹವಷ್ಟೇ ಎಂದರು.