ಡಿ ಕೆ ಶಿವಕುಮಾರ್ ನನಗೆ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಗೋಕಾಕ್: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡದಂತೆ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡದಂತೆ ತಾಕೀತು ಮಾಡಿದರು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಮಗೆ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮಾಂತರ ಭಾಗವನ್ನು ಕಾಂಗ್ರೆಸ್ ನಿಂದ ಜನಪ್ರಿಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿನಿಧಿಸುತ್ತಿದ್ದು, ಬಿಜೆಪಿ ಈ ವರ್ಷ ನಾಗೇಶ್ ಮನ್ನೊಳ್ಕರ್ ಅವರನ್ನು ಕಣಕ್ಕಿಳಿಸಿದೆ. ಕಳೆದ 2018ರ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು ಸೋಲಿಸಿದ್ದರು. ಜೆಡಿಎಸ್ ನಿಂದ ಈ ಬಾರಿ ಶಂಕರಗೌಡ ಪಾಟೀಲ್ ಅವರನ್ನು ಸ್ಪರ್ಧೆಗೆ ನಿಲ್ಲಿಸಿದೆ.

ಸಿಡಿ ಕೇಸು ಸೇರಿದಂತೆ ಹಲವು ಪ್ರಕರಣಗಳ ತನಿಖೆಗೆ ಒತ್ತಾಯ: ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಮ್ಮ ವಿರುದ್ಧ ಕೇಳಿಬಂದ ಗಂಭೀರ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡ ಸಿ ಡಿ ಪ್ರಕರಣ ಸೇರಿದಂತೆ ಕೆಲವು ಕೇಸುಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

2019ರಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ನಂತರ ಡಿ ಕೆ ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿನ ಸಂಬಂಧ ತೀರಾ ಹಳಸಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com