ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಇದೀಗ ಮುಖ್ಯಮಂತ್ರಿ ರೇಸ್ ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಔಟ್ ಆಗಿದ್ದು, ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ದಕ್ಷಿಣ ಭಾರತದಿಂದ ಬಿಜೆಪಿಯನ್ನು ಮುಕ್ತಗೊಳಿಸಿರುವ ಕಾಂಗ್ರೆಸ್ ನಲ್ಲಿ ಇದೀಗ ಆತ್ಮ ವಿಶ್ವಾಸ ಹೆಚ್ಚಾಗಿದ್ದು, 2024ರ ಲೋಕಸಭಾ ಚುನಾವಣೆ ಗೆಲುವಿನತ್ತಾ ಗಮನ ಹರಿಸುವುದಾಗಿ ಖರ್ಗೆ ಅವರು ಹೇಳಿದ್ದಾರೆ.
ನೂತನ ಶಾಸಕರು ಬೆಂಗಳೂರಿಗೆ ಧಾವಿಸುವಂತೆ ಪಕ್ಷ ಸೂಚಿಸಿದ್ದು, ಭಾನುವಾರ ಸಂಜೆ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ತಮ್ಮ ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಈ ಸಭೆ ಕೇವಲ ಔಪಚಾರಿಕವಾಗಿ ಕಂಡುಬರುತ್ತಿದ್ದು, ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಬಹುದು ಎಂದು ಮೂಲಗಳು ತಿಳಿಸಿವೆ.
ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಮತ್ತಿತರ ಮುಖಂಡರು ಅಂತಿಮವಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಕರ್ನಾಟಕ ರಾಜಕೀಯದಲ್ಲಿ ಹಿಡಿತ ಹೊಂದಿದ್ದಾರೆ. ಶಿವಕುಮಾರ್ ಅವರನ್ನು ಸಿಎಂ ಮಾಡಲು ಒಕ್ಕಲಿಗ ಸಮುದಾಯದ ಮುಖಂಡರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ತಮ್ಮ ಸಮುದಾಯದ ಧಾರ್ಮಿಕ ಮುಖಂಡರ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ಸಿದ್ದರಾಮಯ್ಯನವರ ಬಗ್ಗೆ ಹೇಳುವುದಾದರೆ, ಕೆಲವು ಶಾಸಕರು ಸೇರಿದಂತೆ ಅವರ ನಿಷ್ಠಾವಂತರು ಕೂಡ ಉನ್ನತ ಹುದ್ದೆಗಾಗಿ ಅವರನ್ನು ಬೆಂಬಲಿಸುತ್ತಿದ್ದಾರೆ.
Advertisement