ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾ ಸೋಲು ಅನುಭವಿಸಿದ ಆಡಳಿತರೂಢ ಬಿಜೆಪಿ ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಮೀಸಲಾದ ಕ್ಷೇತ್ರಗಳಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ.
ಅಲ್ಲದೆ, ಪರಿಶಿಷ್ಟ ಜಾತಿ(ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾದ 36 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.
ರಾಜ್ಯದಲ್ಲಿ ಒಟ್ಟು 51 ಮೀಸಲು ಕ್ಷೇತ್ರಗಳಿದ್ದು, ಅದರಲ್ಲಿ 36 ಕ್ಷೇತ್ರಗಳು ಎಸ್‌ಸಿ ಅಭ್ಯರ್ಥಿಗಳಿಗೆ ಮತ್ತು 15 ಎಸ್‌ಟಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. 15 ಎಸ್ ಟಿ ಮೀಸಲು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದು ಬೀಗಿದೆ.
ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಿಸಿದ್ದ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರದ ಹೊರತಾಗಿಯೂ ಮೀಸಲು ಕ್ಷೇತ್ರಗಳಲ್ಲಿ ಕೇಸರಿ ಪಕ್ಷ ಅತ್ಯಂತ ಕಳಪೆ ಪ್ರದರ್ಶನ ತೋರಿದೆ.
224 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 135 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. 36 ಎಸ್‌ಸಿ ಸ್ಥಾನಗಳ ಪೈಕಿ 21ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, 12ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಜನತಾ ದಳ-ಸೆಕ್ಯುಲರ್ ಕೇವಲ ಮೂರು ಮೀಸಲು ಕ್ಷೇತ್ರಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
Advertisement