ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡುವ ಬದಲು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲಿ: ಎಚ್‌ಡಿಕೆ

ರಾಜ್ಯ ಗುಪ್ತಚರ ವರದಿ ಪ್ರಕಾರ 45 ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದ್ದು, ಶಾಸಕರನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕಸರತ್ತು ನಡೆಸುತ್ತಿದ್ದಾರೆ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಹಾಸನ: ರಾಜ್ಯ ಗುಪ್ತಚರ ವರದಿ ಪ್ರಕಾರ 45 ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದ್ದು, ಶಾಸಕರನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕಸರತ್ತು ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ. 

ಇಂದು ಪಕ್ಷದ ಶಾಸಕರೊಂದಿಗೆ ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಜೆಡಿಎಸ್ ಶಾಸಕರನ್ನು ಸೆಳೆಯುವ ವ್ಯರ್ಥ ಪ್ರಯತ್ನ ಮಾಡುವ ಬದಲು ತಮ್ಮ ಪಕ್ಷದ ಶಾಸಕರ ಕಾವಲು ಕಾಯುವುದು ಒಳಿತು. ದುರದೃಷ್ಟವಶಾತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು 136 ಸ್ಥಾನಗಳನ್ನು ಗೆದ್ದರೂ ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಮತ್ತು ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್‌ನ 19 ಶಾಸಕರು ಒಗ್ಗಟ್ಟಾಗಿದ್ದು, ಯಾರೂ ಯಾವುದೇ ಸಂದರ್ಭದಲ್ಲೂ ಜೆಡಿಎಸ್‌ ತೊರೆಯುವುದಿಲ್ಲ ಎಂದು ಎಚ್‌ಡಿಕೆ ಹೇಳಿದರು. 

ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಆರ್ಥಿಕ ಹೊರೆ 10 ಲಕ್ಷ ಕೋಟಿ ರೂ. ದಾಟಲಿದೆ. ರಾಜ್ಯದಲ್ಲಿ ಉಚಿತ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಮೂಲಕ ರಾಜ್ಯ ಸರ್ಕಾರ ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. 

ಕೋಟ್ಯಂತರ ರೂಪಾಯಿ ಲಪಟಾಯಿಸಿದ ಕಾರಣ ಖಾತರಿ ಯೋಜನೆಗಳೂ ಸಂಪೂರ್ಣ ವಿಫಲವಾಗಿವೆ. ಶಕ್ತಿ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಬಿಜೆಪಿ ಹೈಕಮಾಂಡ್ ಮತ್ತು ಜೆಡಿಎಸ್ ವರಿಷ್ಠರು ಮೈತ್ರಿಗೆ ಒಪ್ಪಿಗೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದ್ದು, ಸೀಟು ಹಂಚಿಕೆ ಬಗ್ಗೆ ಪಕ್ಷ ಇನ್ನೂ ನಿರ್ಧರಿಸಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com