ಹಾಸನ: 2019ರ ಲೋಕಸಭೆ ಚುನಾವಣೆ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಚ್ಚಿಡಲು ಇಲ್ಲಿ ಏನೂ ಇಲ್ಲ. ಕೆಳ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದಿದ್ದರೆ ಜನರು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ. ಅಂತೆ ಪ್ರಜ್ವಲ್ ಕೂಡ ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುತ್ತಾರೆ ಎಂದು ಗೌಡ ಹೇಳಿದರು.
ರಾಜ್ಯಸಭಾ ಸದಸ್ಯರೂ ಆಗಿರುವ ದೇವೇಗೌಡರು, ಪ್ರಕರಣದ ವಿಷಯಗಳನ್ನು ಇನ್ನೂ ಅಧ್ಯಯನ ಮಾಡದ ಕಾರಣ ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾವೇರಿ ವಿಚಾರವಾಗಿ ಪ್ರಶ್ನಿಸಿದಾಗ, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕಾವೇರಿ ವಿಚಾರವಾಗಿ ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯವಾಗಿದೆ. ದುರದೃಷ್ಟವಶಾತ್, ನೆರೆಯ ರಾಜ್ಯಗಳ ರೀತಿಯಲ್ಲಿ ಸೂಕ್ಷ್ಮ ವಿಷಯಗಳ ಬಗ್ಗೆ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರುವುದಿಲ್ಲ. ಕಾಂಗ್ರೆಸ್ ಗೆ ಬೆಂಬಲ ನೀಡಲು ಜೆಡಿಎಸ್ ಸಿದ್ಧವಿದೆ. ರಾಜ್ಯದ ಹಿತದೃಷ್ಟಿಯಿಂದ ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಕಾಂಗ್ರೆಸ್ ಮತ್ತು ಬಿಜೆಪಿ ಒಗ್ಗಟ್ಟಿನಿಂದ ಹೋರಾಡಬೇಕು ಎಂದರು.
ಕರ್ನಾಟಕದಲ್ಲಿ ಬರ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಗೌಡರು, ತಮ್ಮ ಅನಾರೋಗ್ಯದ ಕಾರಣ ಕಾವೇರಿ ವಿಚಾರವಾಗಿ ಚರ್ಚಿಸಲು ಸಿಎಂ ಕರೆದಿದ್ದ ಸರ್ವಪಕ್ಷಗಳ ಸಭೆಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಇದೇ ವೇಳೆ ಎಂಎಲ್‌ಸಿಯೂ ಆಗಿರುವ ಪ್ರೆಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಮಾತನಾಡಿ, ಪ್ರತಿಯೊಬ್ಬರೂ ದೇಶದ ಕಾನೂನನ್ನು ಗೌರವಿಸಬೇಕು ಮತ್ತು ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದರು.
Advertisement