ನಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ
ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು
Published: 09th September 2023 11:50 AM | Last Updated: 09th September 2023 02:15 PM | A+A A-

ಜಿ.ಟಿ ದೇವೇಗೌಡ
ಮೈಸೂರು: ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುವಂತೆ ವರಿಷ್ಠ ಎಚ್.ಡಿ. ದೇವೇಗೌಡರನ್ನು ಕೋರಿದ್ದೇನೆ’ ಎಂದು ಹೇಳಿದರು.
ಈಚೆಗೆ ನಡೆದ ಪಕ್ಷದ ಸಭೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದೆವು. ಸೆ.10ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು. ಕಾಂಗ್ರೆಸ್‌ನವರ ದಬ್ಬಾಳಿಕೆಯ ಬಗ್ಗೆ ಜನಪ್ರತಿನಿಧಿಗಳು ಅಳಲು ತೋಡಿಕೊಂಡರು. ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಲು ಎಫ್‌ಐಆರ್ ದಾಖಲಿಸಲಾಗುತ್ತಿದೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ, ಆದರೆ ಮತ ವರ್ಗಾವಣೆ ಅಂದುಕೊಂಡಷ್ಟು ಸರಳವಲ್ಲ; ರಾಜಕೀಯ ವಿಶ್ಲೇಷಕರು ಏನಂತಾರೆ?
ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ಯಾರಂಟಿಗಳ ಕಾರಣದಿಂದಾಗಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು. ಆದ್ದರಿಂದ ಬಿಜೆಪಿ ಜೊತೆ ಮೈತ್ರಿಗೆ ಒಲವು ವ್ಯಕ್ತವಾಯಿತು ಎಂದರು.
ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಈ ಕಾಂಗ್ರೆಸ್ನವರು. ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ದೇವೇಗೌಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮಗೆಲ್ಲಾ ಧೈರ್ಯ ತುಂಬಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ- ಜೆಡಿಎಸ್ ಮೈತ್ರಿ: ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್ ಹೇಳಿದ್ದು ಹೀಗೆ...
‘ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶದ ಮೂಲಕ ಪಕ್ಷದ ಶಕ್ತಿ ಪ್ರದರ್ಶನ ನಡೆಯಲಿದೆ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಬಗ್ಗೆ ಯಾವುದೇ ವಿರೋಧವಿಲ್ಲ. ನಾನು ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಹಿಂದೆ ಬಿಜೆಪಿಗೆ ಹೋಗಿದಕ್ಕೆ ಜನರು ನನ್ನನ್ನು ಸೋಲಿಸಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಈಗ ಮೈತ್ರಿಗೆ ಯಾರೂ ವಿರೋಧ ಮಾಡುತ್ತಿಲ್ಲ. ಕಾಂಗ್ರೆಸ್ ವಿರುದ್ಧ ಇದ್ದಾರೆ’ ಎಂದು ಹೇಳಿದರು.