ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ: ಬಸವರಾಜ ಬೊಮ್ಮಾಯಿ

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ನಾನು ಯಾವತ್ತೂ ರಾಷ್ಟ್ರ ರಾಜಕಾರಣಕ್ಕೆ ಆಸೆ ಪಟ್ಟವನಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ನಾನು ಎಂದಾದರೂ ಹಾಗೆ ಹೇಳಿದ್ದೇನೆಯೇ?. ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಸೇರಿದಂತೆ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಆದರೆ, ಸಭೆಯಲ್ಲಿ ಹಾವೇರಿ ಮತ್ತು ಗದಗ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಬಗ್ಗೆ 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಸದಸ್ಯರೊಂದಿಗೆ ಚರ್ಚಿಸಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚಿಸಲಾಗಿದ್ದು, ಇದರ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕು ಎಂದು ತೀರ್ಮಾನಿಸಲಾಯಿತು. ಅಲ್ಲದೆ, ಯುವಕರು, ಮಹಿಳೆಯರು ಮತ್ತು ಒಬಿಸಿ ಸಮುದಾಯಗಳಿಗೆ ಆದ್ಯತೆ ನೀಡುವ ಮೂಲಕ ಪಕ್ಷವನ್ನು ಬೂತ್ ಮಟ್ಟದಿಂದ ಪುನರ್ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ದೆಹಲಿ ಸಭೆಗಳಲ್ಲಿ ಏನಾಯಿತು ಎಂಬುದರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲ. ಆದರೆ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಭೇಟಿ ಸ್ವಾಗತಾರ್ಹ. ಈಗಾಗಲೇ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದ ವಿರುದ್ಧ ಜೆಡಿಎಸ್‌ನೊಂದಿಗೆ ಪಕ್ಷವು ಜಂಟಿಯಾಗಿ ಆಂದೋಲನ ನಡೆಸುತ್ತಿದೆ. ಸೀಟು ಹಂಚಿಕೆ ಕುರಿತು ಒಂದೆರಡು ವಾರಗಳಲ್ಲಿ ಅಂತಿಮಗೊಳಿಸಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಮತ್ತು ಅವರಲ್ಲಿ ಹಲವರು ಸಿಎಂಗೆ ಬಹಿರಂಗ ಪತ್ರವನ್ನೂ ಬರೆದಿದ್ದಾರೆ. ಆದರೆ, ಅವರ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಿವೆ ಎಂದರು.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ

ಸಿದ್ದರಾಮಯ್ಯ1.0 ಮತ್ತು 2.0 ನಡುವೆ ಅಜಗಜಾಂತರ ವ್ಯತ್ಯಾಸವಿದೆ. ದೊಡ್ಡ ಮಟ್ಟದ ಭ್ರಷ್ಟಾಚಾರ ಮೂಗಿನ ನೇರದಲ್ಲೇ ಕಾಣಿಸುತ್ತಿದ್ದರೂ ಮುಖ್ಯಮಂತ್ರಿ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಬರ ಪೀಡಿತ ಪ್ರದೇಶಗಳನ್ನು ಘೋಷಿಸಿ, ಕೇಂದ್ರದಿಂದ ಎನ್‌ಡಿಆರ್‌ಎಫ್ ಅಡಿಯಲ್ಲಿ ಬಿಡುಗಡೆ ಮಾಡಿದ ಹಣ ಖರ್ಚು ಮಾಡುವಲ್ಲಿ ವಿಫಲರಾಗಿದ್ದಾರೆ. ರೈತರ ಆತ್ಮಹತ್ಯೆಯನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಮತ್ತೊಂದೆಡೆ, ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರ ಸಚಿವರೊಬ್ಬರು ಹೇಳಿದರು. 'ಇದು ನಿಮ್ಮ ತತ್ವ ಮತ್ತು ಸಿದ್ಧಾಂತವೇ?' ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com