ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ ಬೈ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಕೊಪ್ಪಳ: ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ನಾಳೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಸಂಗಣ್ಣ ಕರಡಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಕೊಪ್ಪಳ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಸಂಗಣ್ಣ ಕರಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ನಾಳೆ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಸಂಗಣ್ಣ ಕರಡಿ ಅವರು ಇಮೇಲ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ತಮ್ಮ ರಾಜೀನಾಮೆ ಪತ್ರ ಕಳಿಸಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದು ಸಂಗಣ್ಣ ಕರಡಿ ಅವರು ಹೇಳಿದ್ದಾರೆ.
ಈ ಬಾರಿ ಬಿಜೆಪಿ ಹೊಸಮುಖ ಡಾ. ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ಸಂಗಣ್ಣ ಕರಡಿ ಅವರನ್ನು ಬಿಜೆಪಿಯ ರಾಜ್ಯಮಟ್ಟದ ನಾಯಕರು ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ