
ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್ 3 ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ. ಭ್ರಷ್ಟಾಚಾರ, ಹಗರಣಗಳಿಂದ ಕೂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಜನಾಂದೋಲನ ನಡೆಸಲಾಗುವುದು. ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ, ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದಾಗ ಪಾದಯಾತ್ರೆಗೆ ಇದು ಸೂಕ್ತ ಸಮಯವಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಅದಾದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಜಯೇಂದ್ರ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರನ್ನು ಮನವೊಲಿಸಿದರು ಎನ್ನಲಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್‌ವಾಲ್ ಮಾತನಾಡಿ, ಬಿಜೆಪಿ- ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆ ನಡೆಸಲಿವೆ. ಎರಡೂ ಪಕ್ಷಗಳ ಜನಪ್ರತಿನಿಧಿಗಳು, ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಆಗಸ್ಟ್ 3 ರಂದು (ಶನಿವಾರ) ಬೆಳಗ್ಗೆ 9.30ಕ್ಕೆ ಆರಂಭವಾಗಲಿರುವ 140 ಕಿ.ಮೀ ಪಾದಯಾತ್ರೆಯಲ್ಲಿ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ತಿಳಿಸಿದ್ದಾರೆ. ಪ್ರತಿದಿನ ಸುಮಾರು 20 ಕಿ.ಮೀ ಕ್ರಮಿಸಲಾಗುವುದು ಎಂದರು. ಪಾದಯಾತ್ರೆಯಲ್ಲಿ ಪ್ರತಿದಿನ ಸುಮಾರು 10,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
Advertisement