ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜಿನಾಮೆಯಿಂದ ತೆರುವಾಗಿರುವ ಚನ್ನಪಟ್ಟಣಕ್ಕೆ ಉಪಚುನಾವಣೆ ನಡೆಯಬೇಕಿದೆ. ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಇದೇ ವೇಳೆ ಬಿಜೆಪಿಯ ಹಿರಿಯ ನಾಯಕ ಸಿ.ಪಿ ಯೋಗೇಶ್ವರ್ ಅವರು ಉಪಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಪರಿಗಣಿಸದಿದ್ದರೆ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸುವ ಮೂಲಕ ನೇರವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದರು.
ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಚನ್ನಪಟ್ಟಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಹಲವು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅಲ್ಲದೆ ತಮ್ಮ ಪುತ್ರಿ ಐಶ್ವರ್ಯ ಅವರನ್ನು ಚನ್ನಪಟ್ಟಣದಲ್ಲಿ ನಿಲ್ಲಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದನ್ನು ಶಿವಕುಮಾರ್ ಸ್ಪಷ್ಟವಾಗಿ ನಿರಾಕರಿಸಿದ್ದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಹೈವೋಲ್ಟೇಜ್ ಪ್ರಚಾರ ಮತ್ತು ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿಗೆ ಸಾಕ್ಷಿಯಾಗಲು ಸಜ್ಜಾಗಿದೆ ಎಂದು ರಾಜಕೀಯ ಮೂಲಗಳು ನಂಬುತ್ತವೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದ್ದು, ಅದನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾನೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್ ಅಭ್ಯರ್ಥಿಯಾಗಬೇಕೆಂಬ ಆಕಾಂಕ್ಷೆಯು ತಪ್ಪಲ್ಲ. ಇನ್ನೊಂದು ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಭಾವ ಮತ್ತು ಬೆಂಬಲವನ್ನು ಯೋಗೇಶ್ವರ್ ಹೊಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿರುವುದರಿಂದ ಮತ್ತು ಕುಮಾರಸ್ವಾಮಿ ಅವರು ಈ ಹಿಂದೆ ಆಯ್ಕೆಯಾಗಿರುವುದರಿಂದ ದೆಹಲಿಯಲ್ಲಿ ಎರಡೂ ಪಕ್ಷಗಳ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
Advertisement