ಬೆಂಗಳೂರು: ನ್ಯಾಯಾಂಗ ಮಧ್ಯಪ್ರವೇಶದ ನಂತರ ಕೋಲ್ಕತ್ತಾದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿರುವುದನ್ನು ಕರ್ನಾಟಕ ಬಿಜೆಪಿ ಸ್ವಾಗತಿಸಿದೆ. ಈ ವಿಷಯವನ್ನು ರಾಜಕೀಯಗೊಳಿಸಿದ್ದಕ್ಕಾಗಿ ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿದೆ.
ಸಾಕ್ಷ್ಯ ನಾಶದ ಆತಂಕ ಮತ್ತು ಘಟನೆಯ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ತನಿಖೆಯನ್ನು ಸಿಬಿಐಗೆ ವಹಿಸಿರುವ ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಬುಧವಾರ ಸ್ವಾಗತಿಸಿದರು.
ಪಶ್ಚಿಮ ಬಂಗಾಳ ಸರ್ಕಾರದ ಅಸಮರ್ಥತೆ ಹಾಗೂ ನಿರ್ಲಕ್ಷ್ಯದ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಸಿಬಿಐ ತನಿಖೆಗೆ ವಹಿಸಿರುವುದು ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬಿದೆ ಎಂದು ಅವರು ಹೇಳಿದರು.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲ್ಕತ್ತಾದಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಮಂಜುಳಾ ಕಳವಳ ವ್ಯಕ್ತಪಡಿಸಿದರು. ಇದು ಗಂಭೀರವಾದ ವಿಷಯವಾಗಿದ್ದು, ಇಂಡಿಯಾ ಮೈತ್ರಿಕೂಟ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ರಾಜಕೀಯಗೊಳಿಸುತ್ತಿದೆ ಮತ್ತು ಅವುಗಳನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡುತ್ತಿದೆ. ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯು ಅತ್ಯಾಚಾರ ಮತ್ತು ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವುದು ಭಯಾನಕವಾಗಿದೆ ಎಂದರು.
ಆಘಾತಕಾರಿ ಘಟನೆ ದೇಶಾದ್ಯಂತ ಲಕ್ಷಾಂತರ ಯುವ ಉದ್ಯೋಗಿ ಮಹಿಳೆಯರಲ್ಲಿ ಕಳವಳವನ್ನು ಉಂಟುಮಾಡಿದೆ. ಆಸ್ಪತ್ರೆ ಆವರಣದಲ್ಲಿ ಸಿಸಿಟಿವಿ ಅಳವಡಿಕೆಯಂತಹ ಸಮಸ್ಯೆಗಳಿಗೆ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ಅಂದರೆ ನಾವು ಯಾವ ಯುಗದಲ್ಲಿ ಜೀವಿಸುತ್ತಿದ್ದೇವೆ? ಎಂದು ಪ್ರಶ್ನಿಸಿದ ಮಂಜುಳಾ, ಮಮತಾ ಬ್ಯಾನರ್ಜಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೇವಲ ರಾಜಕೀಯದ ಬಗ್ಗೆ ತಲೆಕೆಡಿಸಿಕೊಂಡಿವೆ ಎಂದು ಆರೋಪಿಸಿದರು.
Advertisement