ಮಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇನ್ನು ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಐವನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ವೇಳೆ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಎಚ್ಚರಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ತಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಐವಾನ್, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಬೇಕು ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೆ ಆದಂತೆ ರಾಜ್ಯಪಾಲರಿಗೂ ಆಗುತ್ತದೆ ಎಂದು ಹೇಳಿದ್ದಾರೆ.
ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ ಮುಂದಿನ ಹೆಜ್ಜೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರು ಕೂಡಲೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಪಾಲರ ಕಚೇರಿಯನ್ನು ವಶಪಡಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಇನ್ನು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.
ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸೋಮವಾರ ಪ್ರತಿಭಟನಾಕಾರರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರಸ್ತೆ ಮಧ್ಯೆ ಟೈರ್ ಸುಟ್ಟು ರಸ್ತೆ ತಡೆ ನಡೆಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ಬಂಧಿಸಿದ್ದಾರೆ.
ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆಸಿ ಗಾಜು ಪುಡಿ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನೂ ಬಂಧಿಸಲಾಗಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಿ, 'ಮಿಸ್ಟರ್ ಕ್ಲೀನ್ ಸಿಎಂ' ಖ್ಯಾತಿಗೆ ಮಸಿ ಬಳಿಯುವ ಬಿಜೆಪಿಯ ಕುತಂತ್ರ ಇದಾಗಿದ್ದು, ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
Advertisement