ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಹಾಗೂ ಸಾಂವಿಧಾನಿಕ ಹುದ್ದೆಗೆ ಅಗೌರವ ತೋರುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಸಚಿವರು ಮತ್ತು ಶಾಸಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು, ದಾವಣೆಗೆರೆ, ಬೆಳಗಾವಿ, ರಾಮನಗರ, ಮಂಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸಚಿವ ಜಮೀರ್ ಅಹಮದ್ ಹಾಗೂ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಮುಂದುವರೆಯುತ್ತದೆ. ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ವಿರಮಿಸುವುದಿಲ್ಲ ಎಂದು ಎಚ್ಚರಿಸಿದರು.
ದಾವಣಗೆರೆಯ ಬಿಜೆಪಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿಯವರೆಗೂ ಮೆರವಣಿಗೆ ನಡೆಸಿದರು. ರೈಲು ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಘಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಮೆರಣಿಗೆ ನಡೆಸಿದ ಪ್ರತಿಭಟನಾಕಾರರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Advertisement