
ಬೆಳಗಾವಿ: ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಪಕ್ಷಗಳು ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆಸಿದ್ದೇ ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸಲಿದ್ದಾರೆಂದು ಸಚಿವ ರಮೇಶ್ ಜಾರಕಿಹೊಳಿಯವರು ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಷಡ್ಯಂತ್ರವನ್ನು ಬಿಜೆಪಿ-ಜೆಡಿಎಸ್ ನಡೆಸುತ್ತಿದ್ದು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಇದೇ ರೀತಿ ಮುಂದುವರಿದರೆ ರಾಜ್ಯಪಾಲರ ಮುಂದೆ ಸಚಿವರು ಮತ್ತು ಶಾಸಕರ ಪರೇಡ್ ನಡೆಸಲಾಗುವುದು ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಯಾವುದೇ ವಿಷಯಗಳು ಸಿಗದ ಕಾರಣ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯಲು ಸಾಧ್ಯವಿರುವ ಎಲ್ಲಾ ತಂತ್ರಗಳನ್ನು ಹೆಣೆಯುತ್ತಿದೆ. ಹೀಗಾಗಿ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲು ಸಚಿವರು ಮತ್ತು ಶಾಸಕರು ಪರೇಡ್ ನಡೆಸುವ ಪರಿಸ್ಥಿತಿಗಳು ಎದುರಾಗಬಹುದು ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಜನರ ಆಶೋತ್ತರಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ. ಸಿಎಂ ಅವರ ಈ ಪರಿಣಾಮಕಾರಿ ಕಾರ್ಯವೈಖರಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ಬಿಜೆಪಿ ಮತ್ತು ಜೆಡಿಎಸ್ ಅವರನ್ನು ಅಧಿಕಾರದಿಂದ ಕೆಳಗಿಳಿಸರು ಯತ್ನಿಸುತ್ತಿವೆ ಎಂದು ಆರೋಪಿಸಿದರು.
ಇದೇ ವೇಳೆ ಸಿದ್ದರಾಮಯ್ಯ ಸಿಎಂ ಆಗಿ ಮುಂದಿನ ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದು, ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರತಿಪಕ್ಷಗಳ ಷಡ್ಯಂತ್ರಗಳು ಫಲ ನೀಡುವುದಿಲ್ಲ ಎಂದರು.
ಬಿಜೆಪಿ ನಾಯಕತ್ವವು ಆಯಾ ರಾಜ್ಯಗಳ ರಾಜ್ಯಪಾಲರ ಸಹಾಯದಿಂದ ದೇಶಾದ್ಯಂತ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳಿಗೆ ತೊಂದರೆ ನೀಡುತ್ತಿದೆ. ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸಲು ವಿರೋಧ ಪಕ್ಷಗಳು ಅವಕಾಶ ನೀಡುತ್ತಿಲ್ಲ.
ಜೆಡಿಎಸ್ ನಾಯಕರಾದ ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯ ಸರ್ಕಾರವನ್ನು ಬೀಳಿಸುವ ಭರವಸೆ ನೀಡಿರಬಹುದು. ಹೀಗಾಗಿ ಇಂತಹ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಕುತಂತ್ರದ ಬಗ್ಗೆ ಕಾಂಗ್ರೆಸ್ ಜಾಗರೂಕರಾಗಿರಬೇಕು.
ಕಳೆದ ಕೆಲವು ತಿಂಗಳುಗಳಿಂದ ತಮ್ಮ ಸರ್ಕಾರವನ್ನು ಬೀಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಎಂ ಸ್ವತಃ ಹಲವಾರು ಸಂದರ್ಭಗಳಲ್ಲಿ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ನಾಯಕತ್ವವು ಹಲವಾರು ರಾಜ್ಯ ಸರ್ಕಾರಗಳನ್ನು ಉರುಳಿಸಿದ್ದು, ಕಾಂಗ್ರೆಸ್ ನಾಯಕತ್ವವು ಈ ಬಗ್ಗೆ ಎಚ್ಚರವಾಗಿರಬೇಕು ಎಂದು ಹೇಳಿದರು.
Advertisement