
ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಒಂದು ಕ್ಷಣವೂ ತಡ ಮಾಡದೆ ಬಿಡುಗಡೆ ಮಾಡಿ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿ, ಪಕ್ಷ ಮತ್ತು ಕಾರ್ಯಕರ್ತರಿಗೆ ಅವಮಾನ ಆಗುವಂತೆ ಯಾರೂ ನಡೆದುಕೊಳ್ಳಬಾರದು ಎಂದು ಹೇಳಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಕೆಲವು ಬಿಜೆಪಿ ನಾಯಕರು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಗೂ ಮುನ್ನ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ ವಿಜಯೇಂದ್ರ ಅವರನ್ನು ಗುರಿಯಾಗಿಸಿಕೊಂಡಿರುವ ಯತ್ನಾಳ್ ನಡೆ ಬಗ್ಗೆ ಮುಖಂಡರು ಕಳವಳ ವ್ಯಕ್ತಪಡಿಸಿದರು.
ಒಬ್ಬರ ವರ್ತನೆಯಿಂದ ಪಕ್ಷದ ಪ್ರತಿಷ್ಠೆಗೆ ಧಕ್ಕೆಯಾಗಬಾರದು. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ತರುವ ಪ್ರಯತ್ನವನ್ನು ಅವರು (ಯತ್ನಾಳ್) ಮುಂದುವರಿಸಲಿ. ಪಕ್ಷದ ನಾಯಕತ್ವ ಸ್ಪಷ್ಟವಾಗಿದೆ. ಆ ನಿಟ್ಟಿನಲ್ಲಿ ಕರ್ನಾಟಕ ಬಿಜೆಪಿ ಕೆಲಸ ಮಾಡುತ್ತದೆ ಎಂದು ಹೇಳಿದರು.
ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಯಾವುದೇ ಉದ್ದೇಶ ನನಗಿಲ್ಲ. ಪ್ರಾಥಮಿಕ ವಿರೋಧ ಪಕ್ಷವಾಗಿ ನಾವು ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣಗಳು ಸೇರಿದಂತೆ ಕಾಂಗ್ರೆಸ್‌ಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದೇವೆ. ನಮ್ಮ ಪ್ರಯತ್ನದಿಂದಾಗಿ ಜನರು ಈ ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಕರೆಯುತ್ತಿದ್ದಾರೆ. ಹೀಗಿರುವಾಗ ಕೆಲವು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಬಿಜೆಪಿ ನಾಯಕರು ಯಡಿಯೂರಪ್ಪ ವಿರುದ್ಧ ಆರೋಪ ಮಾಡುತ್ತಿದ್ದಾರೆ.
ಪಕ್ಷವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವುದೇ ನನ್ನ ಗುರಿಯಾಗಿದ್ದು, ಅದನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದೇನೆ. ನನ್ನ ವಿರುದ್ಧ ಆರೋಪ ಮಾಡುವ ಮೂಲಕ ಯತ್ನಾಳ್ ಅವರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಈ ಮೂಲಕ ಯತ್ನಾಳ್ ಪಕ್ಷಕ್ಕೆ ಹಾನಿ ಮಾಡುತ್ತಿದ್ದು, ಅವರನ್ನು ದೇವರಾಗಲಿ, ಪಕ್ಷದ ಸದಸ್ಯರಾಗಲಿ ಕ್ಷಮಿಸುವುದಿಲ್ಲ ಎಂದು ತಿಳಿಸಿದರು.
Advertisement