ತುಮಕೂರು: ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ಸೋಮವಾರ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರಬಲ ಸಂದೇಶ ರವಾನಿಸಿದ್ದಾರೆ, ಯಾವುದೇ ಕಾರಣಕ್ಕೂ ಯಾರು ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮುಡಾ ಅಕ್ರಮ ಪ್ರಕರಣದಲ್ಲಿ ತಾವು ಭಾಗಿಯಾಗಿರುವ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಸಿಎಂ, ತಾವು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯಲು ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ,ಸೋಮವಾರ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಬಿ.ಸುರೇಶ್ ಬಾಬು, ಎಂ.ಟಿ.ಕೃಷ್ಣಪ್ಪ, ಬಿಜೆಪಿ ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಎಂಎಲ್ ಸಿ ಚಿದಾನಂದ ಸೇರಿದಂತೆ ಹಲವು ಜೆಡಿಎಸ್ ಶಾಸಕರು ವೇದಿಕೆ ಹಂಚಿಕೊಂಡರು.
ಸೋರೆಕುಂಟೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತುಮಕೂರಿನಲ್ಲಿ 1,259 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. “ನಾನು 41 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಎರಡು ಬಾರಿ ಡಿಸಿಎಂ ಮತ್ತು ಸಿಎಂ ಆಗಿ ಸೇವೆ ಸಲ್ಲಿಸಿದ್ದೇನೆ ಮತ್ತು ವಿರೋಧ ಪಕ್ಷದ ನಾಯಕನೂ ಆಗಿದ್ದೇನೆ. ನಾನು ಭಯಪಡುವ ರೀತಿಯ ವ್ಯಕ್ತಿಯಾಗಿದ್ದರೆ, ನಾನು ಇಂದು ಇಲ್ಲಿ ನಿಲ್ಲುತ್ತಿರಲಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ಭಯಪಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಪ್ರತಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದರು. ಕೆಲವು ದಿನಗಳ ಹಿಂದೆ, ತುಮಕೂರಿನ ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ವಿಶೇಷವಾಗಿ ಬಿ ಸುರೇಶ್ ಗೌಡ ಮತ್ತು ಎಂಟಿ ಕೃಷ್ಣಪ್ಪ ಅವರು "ಗೋ ಬ್ಯಾಕ್ ಸಿದ್ದರಾಮಯ್ಯ" ಎಂದು ಘೋಷಣೆ ಕೂಗಿ ಪ್ರತಿಭಟಿಸಲು ನಿರ್ಧರಿಸಿದ್ದರು. ಏತನ್ಮಧ್ಯೆ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ತಮ್ಮ ಕ್ಷೇತ್ರಗಳಿಗೆ ಹೆಚ್ಚುವರಿ ಅನುದಾನವನ್ನು ನೀಡುವುದಾಗಿ ಹೇಳಿ ವಿರೋಧ ಪಕ್ಷದ ಶಾಸಕರನ್ನು ಮನವೊಲಿಸಿರುವುದಾಗಿ ತಿಳಿಸಿದರು.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳೆರಡೂ ಒಟ್ಟಾಗಿ ಕೆಲಸ ಮಾಡಬೇಕು. ಆಗ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಪರೋಕ್ಷವಾಗಿ ವಿರೋಧ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ ಸಿಎಂ, ರಾಜಕೀಯ ಲಾಭಕ್ಕಾಗಿ ಸರ್ಕಾರವನ್ನು ಟೀಕಿಸಿದರೆ ಮತದಾರರು ತಿರಸ್ಕರಿಸುತ್ತಾರೆ ಎಂದು ಇತ್ತೀಚಿನ ಉಪಚುನಾವಣೆ ಫಲಿತಾಂಶದಲ್ಲಿ ಸಾಬೀತಾಗಿದೆ ಎಂದರು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ವಿರೋಧ ಪಕ್ಷಗಳು ಟೀಕೆ ಮಾಡಲು ಮುಕ್ತವಾಗಿವೆ ಮತ್ತು ನಾನು ಅದನ್ನು ವಿರೋಧಿಸುವುದಿಲ್ಲ. ಆದರೆ ಟೀಕೆಗಳು ರಚನಾತ್ಮಕವಾಗಿರಬೇಕು ಎಂದು ಸಿದ್ದರಾಮಯ್ಯ ಹೇಳಿದರು.
Advertisement