ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ವಾರಾಂತ್ಯದಲ್ಲಿ ಮೈಸೂರಿಗೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕರ್ತರ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಗುರುವಾರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರ ಪ್ರವಾಸದ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ಅವರು ಫೆಬ್ರವರಿ 10 ರಾತ್ರಿ ದೆಹಲಿಯಿಂದ ನೇರವಾಗಿ ಮೈಸೂರು ತಲುಪಲಿದ್ದಾರೆ. ಫೆಬ್ರವರಿ 11 ರಂದು ಬೆಳಿಗ್ಗೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಜೆ ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಬಿಜೆಪಿ ಕಾರ್ಯಕರ್ತರ ಸಭೆಯನ್ನೂ ಆಯೋಜಿಸುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ನಿರ್ಧರಿಸಿವೆ. ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದರು.
2019 ರ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷವು ಬೆಂಬಲಿಸಿದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಸೇರಿದಂತೆ ರಾಜ್ಯದ ಒಟ್ಟು 28 ಲೋಕಸಭಾ ಸ್ಥಾನಗಳ ಪೈಕಿ 26 ರಲ್ಲಿ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು.
Advertisement