ಪಾಕ್ ಪರ ಘೋಷಣೆ ಪ್ರಕರಣ: ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಪಾಕ್ ಪರ ಘೋಷಣೆ ಪ್ರಕರಣ: ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ಮನವಿ
ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ಮನವಿ
Updated on

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಬಿಜೆಪಿ ಮನವಿ ಮಾಡಿದೆ.

ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಮುಸ್ಲಿಂ ಮೂಲಭೂತವಾದಿಗಳು ಗಲಾಟೆ ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ. ಎಫ್ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದರು.

ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ಮನವಿ
ಪಾಕಿಸ್ತಾನ ಪರ ಘೋಷಣೆ ಪ್ರಕರಣ: ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಗ್ಯುದ್ಧ, ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧವನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಕೆಲಸ ದೇವರ ಕೆಲಸ ಎಂದರೆ, ಈ ಸರ್ಕಾರ ಅದಕ್ಕೆ ಅಪಮಾನ ಮಾಡುತ್ತಿದೆ. ಈ ಪ್ರಕರಣ ಮುಚ್ಚಿಹಾಕಿ ದೇಶದ್ರೋಹಿಗಳಿಗೆ ರಕ್ಷಣೆ ನೀಡುವ ಇವರು ಭಂಡರು ಎಂದರು.

ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಜನರು ಇದನ್ನು ಮನಗಾಣಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆಯಲ್ಲಿ ಹಿಂದೂ ವಿರೋಧಿ ಕಾರ್ಕೋಟಕ ವಿಷ ಇದೆ. ಪ್ರಧಾನಿ ಮೋದಿ ವಿರುದ್ಧ ದ್ವೇಷ ತುಂಬಿದೆ. ಮೋದಿ ಎಂದರೆ ಕಾಂಗ್ರೆಸ್ ನಾಯಕರು ಭಯ ಪಡುತ್ತಾರೆ ಎಂದರು.

ಬಿ.ಕೆ.ಹರಿಪ್ರಸಾದ್ ಅವರು ಪಾಕಿಸ್ತಾನಿಗಳು ಸಹೋದರರು ಎನ್ನುತ್ತಾರೆ. ಕಾಂಗ್ರೆಸ್ ನಾಯಕರ ಮನಸ್ಸಿನ ಪೂರ್ತಿ ಪಾಕಿಸ್ತಾನ ತುಂಬಿಕೊಂಡಿದೆ. ಇದೇ ರೀತಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನ ಬ್ರದರ್ಸ್ ಎಂದಿದ್ದರು ಎಂದು ನೆನಪಿಸಿದರು.

ಎಫ್ಎಸ್ಎಲ್ ವರದಿ ಬಹಿರಂಗಪಡಿಸಿ

ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ. ಯಾರನ್ನೋ ರಕ್ಷಣೆ ಮಾಡಲು ಸರ್ಕಾರ ವರದಿಯನ್ನು ಮುಚ್ಚಿಡುವುದು ಬೇಡ. ಈಗಾಗಲೇ ಮಾಧ್ಯಮಗಳಲ್ಲಿ ಈ ಸುದ್ದಿ ಬಂದಿದೆ. ಈಗ ಜನರಿಗೆ ವರದಿ ನೀಡಲಿ ಎಂದು ಆರ್.ಅಶೋಕ್ ಆಗ್ರಹಿಸಿದರು.

ಜಾತಿ ಗಣತಿ ಅವೈಜ್ಞಾನಿಕ

ಸರ್ಕಾರ ರೂಪಿಸಿರುವ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಇದನ್ನು ವೈಜ್ಞಾನಿಕವಾಗಿ ರೂಪಿಸಲಿ. ಸರಿಯಾದ ಅಂಕಿ ಅಂಶ ಸಂಗ್ರಹಿಸಿ ವರದಿ ರೂಪಿಸಲಿ ಎಂದು ಆರ್.ಅಶೋಕ್ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com