ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಹೆಚ್ಚಿನ ಸ್ಪಷ್ಟನೆ ಬೇಕಿದ್ರೆ ಸಿದ್ದರಾಮಯ್ಯ, ಡಿಕೆಶಿ ಕೇಳಿ: ಖರ್ಗೆ

ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ:  ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ

ರಾಜ್ಯದಲ್ಲಿ ಮೂವರು ಡಿಸಿಎಂ ವಿಚಾರದ ಕುರಿತು ಪ್ರತಿಕ್ರಿಯಿಸಿದ ಖರ್ಗೆ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದರು. ಇದೆಲ್ಲಾ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು. ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವರೆಗೆ ಇಂತಹದಕ್ಕೆ ಅವಕಾಶ ಕೊಡಬಾರದು' ಎಂದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ನಾಳೆ(ಬುಧವಾರ) ಸಭೆ ಕರೆಯಲಾಗಿದೆ. ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾಳೆ ಸಭೆ ನಡೆಯಲಿದೆ ಎಂದು ಖರ್ಗೆ ಹೇಳಿದರು.

ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಕಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಒಂದಾಗಿ, ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದೆ. ಅದಕ್ಕೆ ಬದ್ಧರಾಗಿ ಎಲ್ಲರೂ ಒಂದಾಗಿ ಕೆಲಸ ನಿರ್ವಹಿಸುತ್ತೇವೆ. ನಾಳೆ ದೆಹಲಿಯಲ್ಲಿ ಅನೇಕ ಘಟಕಗಳ ಮೀಟಿಂಗ್ ಕರೆಯಲಾಗಿದೆ. ಎಲ್ಲಾ ಮತಕ್ಷೇತ್ರಗಳಿಗೆ ಈಗಾಗಲೆ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕೆಲವು ದಿನಗಳಿಂದ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿದೆ. ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಭಾವಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮೈಸೂರು ಜಿಲ್ಲೆಯ ಪ್ರಮುಖ ದಲಿತ ಮುಖಂಡ ಮತ್ತು ಸಿಎಂ ಸಿದ್ದರಾಮಯ್ಯ ಅವರ  ಆಪ್ತ ಎಚ್.ಸಿ ಮಹದೇವಪ್ಪ, ಹೆಚ್ಚಿನ ಡಿಸಿಎಂ ಹುದ್ದೆಗಳಿಗೆ ಬೇಡಿಕೆ ಇಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ವಿವಿಧ ಸಮುದಾಯಗಳಿಗೆ ಡಿಸಿಎಂ ಹುದ್ದೆಗಳನ್ನು ಹಂಚಿಕೆ ಮಾಡುವುದು ಪಕ್ಷಕ್ಕೆ ಉತ್ತಮವಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿ ಪ್ರವಾಸದ ವೇಳೆ ಈಗಾಗಲೇ ಮೂರು ಡಿಸಿಎಂ ಹುದ್ದೆಗಳ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತರ ಮುಖಂಡರನ್ನು ಡಿಸಿಎಂ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com