'ಲೋಕ' ಮಹಾಸಮರ ಗೆಲ್ಲಲು ಬಿಜೆಪಿ ರಣತಂತ್ರ: ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಕಾರ್ಯತಂತ್ರ!

ಪ್ರತಿ ಲೋಕಸಭಾ ಕ್ಷೇತ್ರಕ್ಕೂ ಪ್ರತ್ಯೇಕವಾದ ಚುನಾವಣಾ ಕಾರ್ಯತಂತ್ರ ರೂಪಿಸಲು ಬುಧವಾರದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಅಶೋಕ್ ಮತ್ತು ಸದಾನಂದಗೌಡ
ಅಶೋಕ್ ಮತ್ತು ಸದಾನಂದಗೌಡ
Updated on

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಕ್ಕೂ ಪ್ರತ್ಯೇಕವಾದ ಚುನಾವಣಾ ಕಾರ್ಯತಂತ್ರ ರೂಪಿಸಲು ಬುಧವಾರದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಗರದ ಹೊರ ವಲಯದ ರಮಾಡ ರೆಸಾರ್ಟ್‌ನಲ್ಲಿ ಲೋಕಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಇಂತಹ ಸಭೆ ನಡೆಸುವುದಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ತಿಳಿಸಿದ್ದಾರೆ. ಅಲ್ಲಿ ಸ್ಥಳೀಯವಾಗಿ ಚುನಾವಣಾ ಕಾರ್ಯತಂತ್ರ ನಿರ್ಧರಿಸಲಾಗುವುದು’ ಎಂದರು. ಸ್ಥಳೀಯವಾಗಿ ಬಿಜೆ‍ಪಿ ಮುಖಂಡರಲ್ಲಿ ಇರುವ ಭಿನ್ನಾಭಿಪ್ರಾಯ ಗೊಂದಲಗಳನ್ನು ಪರಿಹರಿಸುವ ಕೆಲಸ ಆರಂಭವಾಗಿದೆ. ಆದಷ್ಟು ಬೇಗ ಎಲ್ಲವನ್ನೂ ಪರಿಹರಿಸಲಾಗುವುದು ಎಂದು ಹೇಳಿದರು.

ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಚರ್ಚಿಸಿದ್ದು, ಅಭ್ಯರ್ಥಿಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಪಕ್ಷದ ಕೇಂದ್ರ ನಾಯಕರು ಅಭ್ಯರ್ಥಿಯ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅವರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಎಲ್ಲಾ 28 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದ ವಿಜಯೇಂದ್ರ ತಿಳಿಸಿದರು. ಬುಧವಾರದ ಸಭೆಯಲ್ಲಿ ಪಕ್ಷದ ಮುಖಂಡರು ನೀಡಿದ ಸಲಹೆಗಳ ಕುರಿತು ವಿವರವಾಗಿ ಚರ್ಚಿಸಿದರು. ಏತನ್ಮಧ್ಯೆ, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಹಾಜರಾಗದ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.

ಕಾರ್ಯಕ್ರಮಕ್ಕೆ ಹಾಜರಾಗದೆ ಇರುವ ಮೂಲಕ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹಿಂದೂಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮುಸ್ಲಿಂ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದೆ ಎಂದು ದೂರಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಟ್ಯಾಬ್ಲೋ ಆಯ್ಕೆ ಮಾಡದ ಕೇಂದ್ರದ ಮೇಲೆ ಸಿಎಂ ಸಿದ್ದರಾಮಯ್ಯ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಜನರನ್ನು ಕೆರಳಿಸಲು ಯತ್ನಿಸುತ್ತಿದ್ದು, ಮೆರವಣಿಗೆಯಲ್ಲಿ ಕರ್ನಾಟಕಕ್ಕೆ ಟ್ಯಾಬ್ಲೋ ಹಾಕಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com