ಮುಡಾ ಹಗರಣ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸದಿರಲು BJP ನಿರ್ಧಾರ!

ರಾಜ್ಯದಲ್ಲೀಗ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಕನಿಷ್ಠ 150 ಸ್ಥಾನ ಗೆಲ್ಲಲಿದೆ. ಜನರು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಪ್ರತಿನಿಧಿಸುವ ಜಿಲ್ಲೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸದಿರಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.

ಗುರುವಾರ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿಯ ಬಳಿಕ ನಡೆದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್‌ ಅಗರ್‌ವಾಲ್‌ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ‘ಮುಡಾ’ ಹಗರಣದ ವಿರುದ್ಧವೂ ಹೋರಾಟ ತೀವ್ರಗೊಳಿಸಬೇಕು. ಮುಖ್ಯಮಂತ್ರಿ ರಾಜೀನಾಮೆಗೆ ಪಟ್ಟುಹಿಡಿಯಬೇಕು ಎಂದು ಸೂಚಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ದಯನೀಯ ಸೋಲು ಕಂಡಿದೆ. ರಾಜ್ಯ ಸರ್ಕಾರದ ವಿರುದ್ಧ ಜನರು ಮತ ಚಲಾಯಿಸಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮತ್ತೆ ಚುನಾವಣೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವವೇ ಕಾರಣ. ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸುವುದನ್ನು ಖಚಿತಪಡಿಸಿದ್ದಕ್ಕಾಗಿ ಇಡೀ ರಾಷ್ಟ್ರವೇ ಕರ್ನಾಟಕದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಮುಡಾ ಹಗರಣ ಸಿಬಿಐಗೆ ಕೊಡುವ ಪ್ರಕರಣವೇ ಅಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ಸಾಧ್ಯವಾಗದಿದ್ದರೂ, 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮತ ಪ್ರಮಾಣವೂ ಹೆಚ್ಚಾಗಿದೆ. ಫಲಿತಾಂಶ ಕುರಿತು ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಧೈರ್ಯವಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣೆಗೆ ಕರೆ ನೀಡಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲೀಗ ವಿಧಾನಸಭೆ ಚುನಾವಣೆ ನಡೆದರೆ ಬಿಜೆಪಿ ಕನಿಷ್ಠ 150 ಸ್ಥಾನ ಗೆಲ್ಲಲಿದೆ. ಜನರು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿದ್ದಾರೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಪ್ರತಿನಿಧಿಸುವ ಜಿಲ್ಲೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ ಎಂದು ಹೇಳಿದರು.

ಹಗರಣ ಕುರಿತು ಸಚಿವ ಸಂಪುಟಕ್ಕೆ ಸಿಎಂ ಮಾಹಿತಿ? ಇಲ್ಲ ಎಂದ ಹೆಚ್.ಕೆ.ಪಾಟೀಲ್

ಮುಡಾದಲ್ಲಿ ನಡೆದಿರುವ ಅಕ್ರಮಗಳಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಎಳೆದು ತಂದಿರುವ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ತಮ್ಮ ಕೆಲ ಸಚಿವರು ಪ್ರಸ್ತಾಪಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

ತಮ್ಮ ಪತ್ನಿಗೆ ನಿವೇಶನ ಮಂಜೂರು ಮಾಡುವಾಗ ಎಲ್ಲಾ ಕಾನೂನು ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಸಿಎಂ ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೆಚ್.ಕೆ.ಪಾಟೀಲ್ ಅವರು, ಬಿಜೆಪಿಯವರ ಆರೋಪ ನಿರಾಧಾರ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಪರಿಹಾರವಾಗಿ ನಿವೇಶನ ಹಂಚಿಕೆ ಪ್ರಕ್ರಿಯೆ ನಡೆದಿತ್ತು. ಸಚಿವ ಸಂಪುಟದಲ್ಲಿ ಮುಡಾ ಮತ್ತು ಎಸ್‌ಟಿ ಕಾರ್ಪೊರೇಷನ್‌ ವಿಷಯಗಳ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com