
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಠಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಈಗ ಒಡೆದ ಮನೆಯಾಗಿದ್ದು, ಈ ಗೊಂದಲಗಳ ಕರಿನೆರಳು ಮುಂಬುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪಾತ್ರವಿದೆ ಎಂದು ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಆರೋಪಿಸಿದ್ದಾರೆ.
ಸುರೇಶ್ ಸೋಲಿನಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಹತಾಶರಾಗಿದ್ದು, ಇದೀಗ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪಾಳಯದಲ್ಲಿ ಜಟಾಪಟಿ ಏರ್ಪಟ್ಟಿರುವುದರಿಂದ ಪಕ್ಷದೊಳಗೆ ಗೊಂದಲ ಉಂಟಾಗಿದೆ. ಇದು ಅವರ ಮನೋಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಶಿವಕುಮಾರ್ ಅಥವಾ ಸುರೇಶ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದರೆ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಮನಃಪೂರ್ವಕವಾಗಿ ತೊಡಗಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಇದಲ್ಲದೆ ಸಿಎಂ ಹಾಗೂ ಡಿಸಿಎಂ ತಿಕ್ಕಾಟವು ಶಿಗ್ಗಾಂವಿ ಉಪಚುನಾವಣೆ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಮಂಗಳೂರು-ಉಡುಪಿ ಸ್ಥಳೀಯ ಸಂಸ್ಥೆಗಳಿಂದ ಎಂಎಲ್‌ಸಿ ಸ್ಥಾನಕ್ಕೆ ನಡೆದ ಉಪಚುನಾವಣೆಗೆ ಯಾವುದೇ ಅಲ್ಪಸಂಖ್ಯಾತ ಮುಖಂಡರನ್ನು ಸಮಿತಿಗೆ ಸೇರಿಸಿಕೊಳ್ಳದ ಕಾರಣ, ಅಲ್ಪಸಂಖ್ಯಾತರು ಈಗಾಗಲೇ ಡಿಕೆ.ಶಿವಕುಮಾರ್ ಅವರ ಮೇಲೆ ಅಸಮಧಾನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿ ಸಮಿತಿಯಲ್ಲಿ ಡಿಕೆಶಿಯವರಿಗೆ ಸ್ಥಾನಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಆದರೆ, ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಇ.ತುಕಾರಾಂ ಗೆದ್ದಿದ್ದನ್ನು ಪಕ್ಷ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Advertisement