ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಹಕ್ಕು ಕಾಂಗ್ರೆಸ್‌ಗಿಲ್ಲ, ಇದು ತುಘಲಕ್‌ ಹುಚ್ಚರ ಆಡಳಿತ: ಆರ್. ಅಶೋಕ್ ಕಿಡಿ

'ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ?
ಆರ್.ಅಶೋಕ್
ಆರ್.ಅಶೋಕ್
Updated on

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಹಕ್ಕು ಕಾಂಗ್ರೆಸ್‌ಗಿಲ್ಲ, ಇದು ತುಘಲಕ್‌ ಹುಚ್ಚರ ಆಡಳಿತ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ? ಎಂದು ಪ್ರಶ್ನಿಸಿದರು.

ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು. ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ. ಆಯಾಯಾ ಜಿಲ್ಲೆಗೆ ಅದರದ್ದೇ ಆದ ಘನತೆ ಇದೆ. ಹುಚ್ಚರಂತೆ, ತುಘಲಕ್‌ರಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದು ಎಂದು ಎಚ್ಚರಿಕೆ ನೀಡಿದರು. ಈ ಸಂಬಂಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಜೆಡಿಎಸ್‌-ಬಿಜೆಪಿಯಲ್ಲಿ ಸಮನ್ವಯದ ಕೊರತೆ ಇಲ್ಲ ಎಂದರು.

ಆರ್.ಅಶೋಕ್
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿ: ಸಿಎಂ ಗೆ ಪ್ರಸ್ತಾವನೆ

ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯಾರೂ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಎಸ್‌ಐಟಿ ಮೂಲಕ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡುವ ಪ್ರಯತ್ನ ನಡೆದಿದೆ. ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ. ನಿಗಮದ ಅಧ್ಯಕ್ಷರೇ ಶಾಂಗ್ರೀಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಬಿಡುಗಡೆಯಾದ ಆಡಿಯೋದಲ್ಲಿ ಎಲ್ಲವೂ ಹೊರಬಂದಿದೆ ಎಂದರು.

ಆರ್.ಅಶೋಕ್
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಝೀಕಾ ವೈರಸ್‌, ಡೆಂಘಿ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡುಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com