
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ನೀಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಕಳೆದುಕೊಂಡವರಿಗೆ ನಿವೇಶನ ಹಂಚಿಕೆಯಲ್ಲಿ ವಂಚನೆ ಎಸಗಿರುವ ಕುರಿತು ರಾಜ್ಯಪಾಲರು ಇತ್ತೀಚೆಗೆ ಮುಖ್ಯ ಕಾರ್ಯದರ್ಶಿಯಿಂದ ವಿಸ್ತೃತ ವರದಿ ಕೋರಿದ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.
ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆ ಕಾಲ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಅಲ್ಲಿಂದ ನಿರ್ಗಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದನದ್ಲಲಿ ಅಂಗೀಕಾರವಾದ ಮೂರು ವಿಧೇಯಕಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ಮೂರು ನಿರ್ಣಯಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ. ಸದನದಲ್ಲಿ ನಡೆಯುತ್ತಿರುವ ಕಾರ್ಯಕಲಾಪದ ವಿವರ ಮತ್ತು ಬೆಳವಣಿಗೆಗಳನ್ನು ಸಹ ಅವರು ರಾಜ್ಯಪಾಲರಿಗೆ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡ ಅಕ್ರಮಗಳ ತನಿಖೆ ವಿಚಾರ ಹಾಗೂ ಇತರ ಪ್ರಸಕ್ತ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ.
Advertisement