ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತಗಳ ಎಣಿಕೆಯನ್ನು ಮೊದಲು ಕೈಗೆತ್ತಿಕೊಂಡಿದ್ದು, ಬಿಜೆಪಿ 11 ಸ್ಥಾನಗಳಲ್ಲಿ, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (ಬಿಜೆಪಿ) ಕ್ರಮವಾಗಿ ಮಂಡ್ಯ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ 29 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕವು ಅತ್ಯಂತ ಪ್ರಮುಖ ರಾಜ್ಯವಾಗಿದೆ. ಏಕೆಂದರೆ, ಬಿಜೆಪಿ ಅಧಿಕಾರದಲ್ಲಿದ್ದ ಏಕೈಕ ದಕ್ಷಿಣದ ರಾಜ್ಯ ಕರ್ನಾಟಕವಾಗಿದೆ. ಹೀಗಾಗಿ, ಕಳೆದ ಬಾರಿಯಂತೆ ಈ ಬಾರಿಯೂ ಕರ್ನಾಟಕದಲ್ಲಿ ಮೇಲುಗೈ ಸಾಧಿಸುವ ತವಕ ಬಿಜೆಪಿಗಿದೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯು ಗೆಲುವು ಸಾಧಿಸಿದ್ದರು.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿತ್ತು. ಆಗ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದು, ಒಟ್ಟಾಗಿ ಚುನಾವಣೆ ಎದುರಿಸಿದ್ದವು.
ಜೆಡಿಎಸ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಸೇರಿತು ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
Advertisement