
ಬೆಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಸೋಲು ಕಂಡಿದ್ದಾರೆ.
ಕರಾವಳಿ ಕರ್ನಾಟಕದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಆರ್ ಪದ್ಮರಾಜ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಮತಗಳ ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.ಈಗಾಗಲೇ ಚೌಟ ಗೆಲುವಿನ ಸಂಭ್ರಮದಲ್ಲಿ ತೊಡಗಿದ್ದು, ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಕಳೆದ 3 ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ, ಈ ಬಾರಿಯೂ ಗಮನ ಸೆಳೆದಿತ್ತು. ಪ್ರಬಲ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುವ ಕ್ಷೇತ್ರದಲ್ಲಿ, ಈ ಬಾರಿ ಎರಡೂ ಪಕ್ಷಗಳು ಹೊಸ ಮುಖಗಳಿಗೆ ಮಣೆ ಹಾಕಿದ್ದವು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸಿನ ಮಿಥುನ್ ಎಂ ರೈ ವಿರುದ್ಧ 2,74,621 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.57.55ರಷ್ಟು ಮತಗಳನ್ನು ಪಡೆದಿತ್ತು.
Advertisement