
ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.
ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ನಟ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು.
ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ 1 ಸ್ಥಾನಗಳನ್ನು ಹೊಂದಿವೆ.
ಇನ್ನೂ ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಫಲಿತಾಂಶ ಸಮಾಧಾನ ತಂದಿಲ್ಲ, ಎನ್ ಡಿ ಎ ಮೈತ್ರಿಕೂಟ ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು. ಮಂಡ್ಯ ಜನತೆಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
Advertisement