
ಹಾಸನ: ತೀವ್ರ ಕೂತುಹಲ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವ, ದಿವಂಗತ ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಹಾಸನದಲ್ಲಿ 25 ವರ್ಷಗಳ ನಂತರ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಮತದಾನಕ್ಕೂ ಮೊದಲು ಹಂಚಿಕೆಯಾದ ಪ್ರಜ್ವಲ್ ರೇವಣ್ಣರದ್ದು ಎಂದು ಆರೋಪಿಸಲಾದ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು.
ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಇದ್ದೇ ಇತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ.
Advertisement