
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಿದೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಜೆಪಿ ಹೊಸ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ, ಇದರಿಂದ ಕರಾವಳಿಯಲ್ಲಿ ಬಿಜೆಪಿಯ ಬಲಿಷ್ಠ ಸ್ಥಾನವನ್ನು ಮತ್ತೊಮ್ಮೆ ದೃಢಪಡಿಸಿದ್ದಾರೆ.ಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು.
ಉಡುಪಿ-ಚಿಕ್ಕಮಗಳೂರಲ್ಲಿ ಹಿಂದೊಮ್ಮೆ ಸಂಸದರಾಗಿದ್ದ ಅನುಭವಿ ರಾಜಕಾರಣಿ ಜಯಪ್ರಕಾಶ್ ಹೆಗ್ಡೆಯವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರಾದರೂ ಅವರಿಗೆ ಗೆಲುವು ಸಾಧ್ಯವಾಗಿಲ್ಲ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪದ್ಮರಾಜ್ ಪೂಜಾರಿ ವಿರುದ್ಧ ಕ್ಯಾಪ್ಟನ್ ಬ್ರಿಜೇಶ್ ಚೌಟ 1.49 ಲಕ್ಷ ಮತಗಳಿಂದ ಜಯಗಳಿಸಿದರೆ, ಹಿರಿಯ ರಾಜಕಾರಣಿ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಅವರು 2.59 ಲಕ್ಷ ಮತಗಳಿಂದ ಕಾಂಗ್ರೆಸ್‌ನ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದಾರೆ. ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ನ ಡಾ.ಅಂಜಲಿ ನಿಂಬಾಳ್ಕರ್ ಅವರನ್ನು 3.37 ಲಕ್ಷ ಮತಗಳಿಂದ ಬಿಜೆಪಿ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲಿಸಿದ್ದಾರೆ.
2019ರಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಕ್ರಮವಾಗಿ 4.79 ಲಕ್ಷ, 3.49 ಲಕ್ಷ ಮತ್ತು 2.73 ಲಕ್ಷ ಮತಗಳಿಂದ ಗೆದ್ದಿತ್ತು.
ಹಾಲಿ ಸಂಸದರ ವಿರುದ್ಧ ಆಡಳಿತ ವಿರೋಧಿ ಭಾವನೆಗಳು ಉಂಟಾಗಿದ್ದರಿಂದ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಬದಲಾಯಿಸಿತ್ತು. ಎರಡು ಬಾರಿ ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಉಡುಪಿ-ಚಿಕ್ಕಮಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದವು.
ಹೀಗಾಗಿ ಪಕ್ಷವು ಶೋಭಾ ಅವರಿಗೆ ಬೆಂಗಳೂರು ಉತ್ತರದ ಟಿಕೆಟ್ ನೀಡಿ, ಪೂಜಾರಿ ಅವರನ್ನು ಕಣಕ್ಕಿಳಿಸಿತ್ತು. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ಜಯಪ್ರಕಾಶ್ ಹೆಗ್ಡೆ ಕ್ಷೇತ್ರದಲ್ಲಿ ಪ್ರಭಾವ ಬೀರಲು ವಿಫಲರಾಗಿದ್ದಾರೆ.
ಉತ್ತರ ಕನ್ನಡದಲ್ಲಿ ಆರು ಬಾರಿ ಸಂಸದರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರ ವಿವಾದಾತ್ಮಕ "ಸಂವಿಧಾನವನ್ನು ಬದಲಿಸಿ" ನಂತರ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಅವರ ಸ್ಥಾನಕ್ಕೆ ಮೃದು ಸ್ವಭಾವದ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿತ್ತು.
ಕಾಗೇರಿಯವಲರು ಪ್ರಚಾರದಿಂದ ದೂರ ಉಳಿದಿದ್ದರು. ಇದು ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹಲವರು ಭಾವಿಸಿದ್ದರು. ಆದರೆ, ಈ ಭಾವನೆ ತಪ್ಪಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದ ನಿಂಬಾಳ್ಕರ್ ಬಿಜೆಪಿಗೆ ಕಠಿಣ ಸವಾಲು ನೀಡುವಲ್ಲಿ ವಿಫಲರಾಗಿದ್ದಾರೆ.
Advertisement