
ಮೈಸೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಮುಂದೆ ಆಡಳಿತಾರೂಢ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸಿದೆ. ಈ ಮೂಲಕ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ ಭಾರೀ ಮುಖಭಂಗವಾಗಿದೆ.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಸೋಲು ಕಂಡಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್ ಜಯಭೇರಿ ಬಾರಿಸಿದ್ದಾರೆ.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ 54 ಸ್ಥಾನಗಳ ಪೈಕಿ 39 ಸ್ಥಾನಗಳನ್ನು ಗೆದ್ದಿದ್ದರಿಂದ ಕಾಂಗ್ರೆಸ್ ಈ ಕ್ಷೇತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿತ್ತು. ಈ ಬಾರಿ ಚಾಮರಾಜನಗರ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂಬ ವಿಶ್ವಾಸದಲ್ಲಿದ್ದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಭಾಗದವರಾಗಿದ್ದರಿಂದ ಕ್ಷೇತ್ರದಲ್ಲಿ ಹಿಡಿತವಿದೆ ಎಂದು ನಂಬಿತ್ತು. ಆದರೆ, ಹಳೇ ಮೈಸೂರು ಭಾಗದಲ್ಲಿನ ಸೋಲು ಪಕ್ಷಕ್ಕೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಈ ಫಲಿತಾಂಶ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತಗಳಿವೆ ಎಂದು ಹೇಳಲಾಗುತ್ತಿದೆ.
ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಕಡೆ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಸಂಘಟನೆಯೂ ಬಲವಾಗಿರಲಿಲ್ಲ. ಅಷ್ಟೊಂದು ಸಂಘಟನಾತ್ಮಕವಾಗಿಯೂ ಚುನಾವಣೆ ಎದುರಿಸಲಿಲ್ಲ. ಆದರೂ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಸತತ ಮೂರನೇ ಬಾರಿಗೆ ಗೆದ್ದು ಬೀಗಿದೆ. ಕ್ಷೇತ್ರದಲ್ಲಿ 5ನೇ ಬಾರಿಗೆ ಕಮಲ ಅರಳಿಸಿದೆ. ಹಿಂದೆ ಸಿ.ಎಚ್.ವಿಜಯಶಂಕರ್ ಹಾಗೂ ಪ್ರತಾಪ್ ಸಿಂಹ ತಲಾ ಎರಡು ಬಾರಿ ಬಿಜೆಪಿ ಅಭ್ಯರ್ಥಿಗಳಾಗಿ ಗೆದಿದ್ದರು.
ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿತ್ತು. ಆದರೆ, ಕೇಂದ್ರದಲ್ಲಿ ಎನ್‌ಡಿಎ ಅಧಿಕಾರ ಹಿಡಿದರೆ ಕುಮಾರಸ್ವಾಮಿ ಅವರಿಗೆ ಉತ್ತಮ ಸ್ಥಾನ ಸಿಗುವ ಸಾಧ್ಯತೆಗಳಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರಿಗೆ ಬೆಂಬಲ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಶಿವಕುಮಾರ್ ಸಹೋದರ ಹಾಗೂ ಹಾಲಿ ಸಂಸದ ಡಿಕೆ ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಖ್ಯಾತ ಹೃದ್ರೋಗ ತಜ್ಞ ಸಿಎನ್ ಮಂಜುನಾಥ್ ಅವರು ಸುರೇಶ್ ಅವರು ಸೋಲು ಕಾಣುವಂತೆ ಮಾಡಿದ್ದಾರೆ.
ಕೆ.ಎಚ್.ಮುನಿಯಪ್ಪ ಮತ್ತು ರಮೇಶ್ ಕುಮಾರ್ ನೇತೃತ್ವದ ಬಣಗಳ ನಡುವಿನ ಭಿನ್ನಾಭಿಪ್ರಾಯದಿಂದ ಕೋಲಾರದಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಇಬ್ಬರ ಭಿನ್ನಾಭಿಪ್ರಾಯಗಳು ಜೆಡಿಎಸ್ ನ ಮಲ್ಲೇಶ್ ಬಾಬು ಅವರಿಗೆ ವರದಾನವಾಗಿ ಪರಿಣಮಿಸಿದೆ. ಇದಲ್ಲದೆ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಕ್ಷೇತ್ರವನ್ನೂ ಪಕ್ಷ ಕಳೆದುಕೊಂಡಿದೆ.
ಈ ನಡುವೆ ಕೇಂದ್ರದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ ಹಾಕುವ ಸಂಸ್ಕೃತಿ ಕರ್ನಾಟಕದಲ್ಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ವಿಧಾನಸಭೆ ಚುನಾವಣೆ ವಿಚಾರ ಬಂದಾಗ ರಾಜ್ಯದ ಮತದಾರರ ಆದ್ಯತೆ ಭಿನ್ನವಾಗಿರುತ್ತದೆ ಎಂದು ಹೇಳಿದ್ದಾರೆ.
Advertisement