
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ನಡೆಸಿದರು.
ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಕುರಿತು ಈ ವೇಳೆ ಚರ್ಚಿಸಲಾಯಿತು.
ಇದಕ್ಕೂ ಮುನ್ನಾ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಭವನ ಹಿಂಭಾಗದ ವಿಶೇಷ ನ್ಯಾಯಾಲಯ ವಿಚಾರಣೆಗೆ ಅವರು ಹಾಜರಾದರು. ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕರ್ನಾಟಕಕ್ಕೆ ಅನ್ಯಾಯ ಮತ್ತು ಅಸಡ್ಡೆ ಧೋರಣೆ ವಿರುದ್ಧ ದನಿ ಎತ್ತುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸದಾಗಿ ಆಯ್ಕೆಯಾದ ಸಂಸದರು ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋತವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಲೋಕಸಭೆಗೆ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಸಂಸದರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಬೆಂಗಳೂರು, ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿರಬೇಕು. ಜನರ ಕೆಲಸ ಮಾಡುವಾಗ ರಾಜ್ಯ ಸರ್ಕಾರದ ನೆರವು ಪಡೆಯುವಂತೆ ಸಲಹೆ ನೀಡಿದರು. ಸೋತ ಅಭ್ಯರ್ಥಿಗಳಲ್ಲಿ ಆತ್ಮ ಸ್ಥೈರ್ಯ ಹೆಚ್ಚಿಸಿದ್ದಾರೆ. ಚುನಾವಣೆಯಲ್ಲಿ ಸೋತರೂ ಜನರ ಮಧ್ಯೆ ಇದ್ದು ನಮಗೆ ಮತ ಹಾಕದವರ ಮನ ಗೆಲ್ಲಲು ಸೂಚಿಸಿದರು ಎಂದು ಶಿವಕುಮಾರ್ ಹೇಳಿದರು.
ಶನಿವಾರ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಈ ಸಭೆ ಮುಗಿಸಿಕೊಂಡು ಬಂದ ನಂತರ ಮತ್ತೆ ಮುಂದಿನ ವಾರ ನಮ್ಮ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮದಲ್ಲಿನ ಅವ್ಯವಹಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಅಕ್ರಮ ನಡೆದಿದ್ದರೆ ರಾಜ್ಯ ಸರ್ಕಾರದ ಅನುಮತಿ ಪಡೆಯದೇ ಸಿಬಿಐ ತನಿಖೆ ನಡೆಸಬಹುದು. ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
Advertisement