
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ (ಎಂವಿಎಸ್‌ಟಿಡಿಸಿ) ನಡೆದಿರುವ 187.33 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ಬಿಜೆಪಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಎಂವಿಎಸ್‌ಟಿಡಿಸಿ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆಗೂ ಒತ್ತಾಯಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಒಂದಾದ ನಂತರ ಒಂದು ಸಾಕ್ಷ್ಯಾಧಾರಗಳು ಸಿಗುತ್ತಿವೆ. ಇದು ದಲಿತರ ಹಣ ಲೂಟಿಯ ಬ್ರಹ್ಮಾಂಡ ಭ್ರಷ್ಟಾಚಾರದ ಪ್ರಕರಣ. ಇನ್ನೂ ಬೇರೆ ಬೇರೆ ಇಲಾಖೆಗಳಲ್ಲೂ ಭ್ರಷ್ಟಾಚಾರ ಹಗರಣ ನಡೆದ ವಾಸನೆ ನಮಗೆ ಸಿಗುತ್ತಿದೆ. ಸಾಕ್ಷ್ಯಾಧಾರ ಸಂಗ್ರಹದ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಅತ್ಯಂತ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಪತ್ರದಲ್ಲಿ ಸಚಿವರ ಮೌಖಿಕ ಸೂಚನೆ ಮೇರೆಗೆ ಹಣದ ವರ್ಗಾವಣೆ ಆಗಿದೆ ಎಂದು ಉಲ್ಲೇಖಿಸಿದ್ದರು. ಇದೀಗ ಲೆಕ್ಕಾಧಿಕಾರಿ ಪರಶುರಾಮ್ ಅವರು 24ರಂದು ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಸಭೆ ಕುರಿತು ಮಾಹಿತಿ ನೀಡಿದ್ದಾರೆ. ಈಗಾಗಲೇ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಅವರನ್ನು ಮುಖ್ಯಮಂತ್ರಿಗಳು ರಕ್ಷಿಸುತ್ತಿರುವುದು ಯಾವ ಕಾರಣಕ್ಕೆ ಎಂದು ಪ್ರಶ್ನಿಸಿದರು.
ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ನಡೆಸಿದ ಸಭೆಯ ಫೂಟೇಜ್ ಅನ್ನು ರಕ್ಷಿಸಬೇಕು. ಸಚಿವರ ಕಚೇರಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆವರಣದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ನಡುವೆ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಶರಣ್ ಪ್ರಕಾಶ್ ಪಾಟೀಲ್ ಅವರು, ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇವೆ ಎಂಬ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿದ್ದೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ಸಾರಸಗಟಾಗಿ ತಳ್ಳಿ ಹಾಕಿದರು. ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದ ಎದುರಿಸಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.
ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ ಅದು ನನ್ನ ಸ್ವಂತ ಮನೆಯೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದುಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಬಸನಗೌಡ ದದ್ದಲ್ ಕೂಡ ಆರೋಪವನ್ನು ನಿರಾಕರಿಸಿದ್ದಾರೆ. ಎಂವಿಎಸ್‌ಟಿಡಿಸಿ ಅಧ್ಯಕ್ಷರಾದ ನಂತರ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿತ್ತು. ಪ್ರತಿಪಕ್ಷಗಳ ಬಳಿ ಯಾವುದೇ ಸಾಕ್ಷ್ಯಾಧಾರಗಳಿದ್ದರೆ ಅದನ್ನು ತನಿಖಾ ಸಂಸ್ಥೆಗೆ ನೀಡಬೇಕು. ಇದರಿಂದ ಸತ್ಯ ಹೊರಬರುತ್ತದೆ. ಅಲ್ಲಿಯವರೆಗೂ ಪ್ರತಿಪಕ್ಷಗಳು ನನ್ನ ವಿರುದ್ಧ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ತನಿಖೆ ನಡೆಯುತ್ತಿದೆ. ಬಿಜೆಪಿ ಸಚಿವರ ವಿರುದ್ಧ ಆರೋಪ ಮಾಡಿದ ಕೂಡಲೇ ಪಾಟೀಲ್ ತಪ್ಪಿತಸ್ಥರಲ್ಲ. ಎಸ್‌ಐಟಿ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತದೆ. ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
Advertisement