
ಬಳ್ಳಾರಿ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಜಯ ದಾಖಲಿಸಿದ್ದ ಕಾಂಗ್ರೆಸ್ ಸಂಸದ ಇ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಹೌದು.. ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ ತುಕಾರಾಂ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್‌ನ ಇ. ತುಕಾರಾಮ್ (E Tukaram) ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು.
Advertisement